'ಸಂಘಟಿತರಾಗಿ ಸೌಲಭ್ಯ ಪಡೆಯಿರಿ'
ಮಂಡ್ಯ: ಗೃಹ ಕಾರ್ಮಿಕರು ಸಂಘಟನಾ ಮನೋಭಾವ ಬೆಳೆಸಿಕೊಂಡು ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಕಾರ್ಮಿಕ ಇಲಾಖೆ ಅಧಿಕಾರಿ ಮಹೇಶ್ ಹೇಳಿದರು.
ನಗರದ ಗಾಂಧಿಭವನದಲ್ಲಿ ಅಖಿಲ ಕರ್ನಾಟಕ ಗೃಹ ಕಾರ್ಮಿಕ ಸಂಘಟನೆ ವತಿಯಿಂದ ನಡೆದ ಮಕ್ಕಳ ಭರವಸೆ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಸಂಘಟಿತ ಗೃಹ ಕಾರ್ಮಿಕರು ಸಂಘಟಿತರಾಗಿ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಚಳವಳಿಗಳನ್ನು ರೂಪಿಸಬೇಕು. ಹಂತ ಹಂತವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸವಲತ್ತುಗಳನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.
ಸಮಾಜ ಸೇವಕ ಗಣಿಗ ರವಿಕುಮಾರ್ ಮಾತನಾಡಿ, ಕಾರ್ಮಿಕರ ಮಕ್ಕಳು ಕಾರ್ಮಿಕರಾಗದೇ ಸರ್ಕಾರಿ ಹುದ್ದೆ ಮತ್ತು ಖಾಸಗಿ ಕ್ಷೇತ್ರಗಳಲ್ಲಿ ಉನ್ನತ ಸ್ಥಾನಗಳನ್ನು ಪಡೆಯುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು. ಜಿಲ್ಲೆಯಲ್ಲಿ ಬಾಲ ಕಾರ್ಮಿಕರು ಹೆಚ್ಚಳವಾಗುತ್ತಿದ್ದಾರೆ. ನಿಯಂತ್ರಿಸುವ ಜವಾಬ್ದಾರಿ ಪೋಷಕರದ್ದಾಗಿರುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ಕಾರ್ಮಿಕರ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ವೇದಿಕೆಯಲ್ಲಿ ಸಂಘಟನೆಯ ಜಿಲ್ಲಾ ಕಾರ್ಯಕರ್ತೆ ಶೋಭಾ, ಪ್ರೇಮ, ಮುಖಂಡ ಸತೀಶ್ ಇದ್ದರು.