ಉತ್ತಮ ಅಭ್ಯರ್ಥಿಗೇ ಮತ ಹಾಕಿ ಗೆಲ್ಲಿಸಲು ಸಲಹೆ
ಶ್ರೀರಂಗಪಟ್ಟಣ: ಮತದಾರರು ತಮ್ಮ ಹಕ್ಕನ್ನು ಪ್ರತಿಪಾದಿಸುವ ಮೂಲಕ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಎಂದು ಪಟ್ಟಣದ ತ್ವರಿತಗತಿ ನ್ಯಾಯಾಧೀಶ ಶ್ರೀಕಾಂತ್ ವೈ. ವಟವಟಿ ಶುಕ್ರವಾರ ಸಲಹೆ ನೀಡಿದರು.
ಪಟ್ಟಣದ ಅಂಬೇಡ್ಕರ್ ಭವನದಲ್ಲಿ ತಾಲೂಕು ಆಡಳಿತ ಮತ್ತು ಕಾನೂನು ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಯುವ ಮತದಾರರು ಸೇರಿದಂತೆ ಪ್ರತಿಯೊಬ್ಬರು ಯೋಚಿಸಿ ತಮ್ಮ ಹಕ್ಕನ್ನು ಪ್ರತಿಪಾದಿಸುವ ಪರಿಪಾಠ ಬೆಳೆಸಿಕೊಳ್ಳಬೇಕು ಎಂದರು.
ದೇಶದ ಚಿತ್ರಣ ಬದಲಾಯಿಸುವ ಸಾಮರ್ಥ್ಯ ಮತದಾರರಿಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೇಶ ಮುನ್ನಡೆಸುವ ಅರ್ಹ ವ್ಯಕ್ತಿಗಳಿಗೆ ಮತ ನೀಡುವ ಮೂಲಕ ದೇಶದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ನ್ಯಾಯಾಧೀಶರು ಹೇಳಿದರು.
ಭಾರತ ಜಗತ್ತಿನಲ್ಲೇ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಹೊರ ಹೊಮ್ಮಿದೆ. ಇತರೆ ರಾಷ್ಟ್ರಗಳು ಸಹ ಇಲ್ಲಿನ ಪ್ರಜಪ್ರಭುತ್ವ ವ್ಯವಸ್ಥೆ ಅಳವಡಿಸಿಕೊಳ್ಳಲು ಪರಿತಪಿಸುತ್ತಿವೆ. ದೇಶದಲ್ಲಿನ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ ಅತ್ಯುತ್ತಮವಾಗಿದೆ. ಇಂತಹ ಉತ್ತಮ ವ್ಯವಸ್ಥೆ ಕಲ್ಪಿಸಲು ಇತರೆ ದೇಶಗಳಿಗೆ ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು. ತಹಶೀಲ್ದಾರ್ ಅರುಳ್‌ಕುಮಾರ್ ಮಾತನಾಡಿ, 18 ವರ್ಷ ತುಂಬಿದ ಯುವಕ ಯುವತಿಯರು ಪ್ರತಿವರ್ಷ ಜನವರಿ ತಿಂಗಳಲ್ಲಿ ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿಕೊಳ್ಳಬೇಕು. ಈ ಮೂಲಕ ತಮ್ಮ ಹಕ್ಕನ್ನು ಪ್ರಜಾತಂತ್ರ ವ್ಯವಸ್ಥೆಯಲ್ಲಿ ಚಲಾಯಿಸಬೇಕು ಎಂದು ಹೇಳಿದರು.
ಇದಕ್ಕೂ ಮೊದಲು ಪಟ್ಟಣದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು, ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿ ಮತದಾನದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಬಿ.ಎಸ್. ಜಯಶ್ರೀ, ಪ್ರಧಾನ ಸಿವಿಲ್ ನ್ಯಾಯಾಧೀಶ ವಿ.ನಾಗರಾಜು, ತಾಪಂ ಇಒ ಅಮರ್‌ನಾಥ್, ಪುರಸಭೆ ಮುಖ್ಯಾದಿಕಾರಿ ರಾಜಣ್ಣ, ಸರ್ಕಾರಿ ವಕೀಲ ನಾರಾಯಣ ಸ್ವಾಮಿ, ತಾಲೂಕು ವಕೀಲರ ಸಂಘದ ಅಧ್ಯಕ್ಷ ಮೂರ್ತಿ, ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎಚ್.ಎನ್. ನಂಜುಂಡಸ್ವಾಮಿ ಉಪಸ್ಥಿತರಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.