ಸಂವಿಧಾನ ಬದ್ಧರಾಗಿ ಕಾರ್ಯ ನಿರ್ವಹಿಸಿ
ಕೆ.ಆರ್.ಪೇಟೆ: ದೇಶದ ಸಂವಿಧಾನಕ್ಕೆ ಬದ್ಧರಾಗಿ ಸರ್ವ ಜನರ ಒಳಿತಿಗೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಅವಶ್ಯಕತೆ ಇದೆ ಎಂದು ಶಾಸಕ ಕೆ.ಬಿ. ಚಂದ್ರಶೇಖರ್ ಅಭಿಪ್ರಾಯಪಟ್ಟರು.
ಪಟ್ಟಣದ ಮಾಧ್ಯಮಿಕ ಶಾಲಾ ಆವರಣದಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಳ್ಳಲಾಗಿದ್ದ 64ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಯುವಜನರು ದೇಶದ ಬಗ್ಗೆ ಅಭಿಮಾನ ಬೆಳೆಸಿಕೊಂಡು ದೇಶ ಕಟ್ಟುವ ಕೆಲಸಕ್ಕೆ ಕಟಿಬದ್ಧರಾಗುವಂತೆ ಮನವಿ ಮಾಡಿದರು.
ಮಾಜಿ ಸ್ಪೀಕರ್ ಕೃಷ್ಣ ಮಾತನಾಡಿ, ಅಧಿಕಾರಿಗಳು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು. ಅನ್ಯಾಯ, ಅಧರ್ಮ, ಭ್ರಷ್ಟಾಚಾರ, ಅನಾಚಾರಗಳ ವಿರುದ್ಧ ಎಚ್ಚೆತ್ತು ಸಂಘಟಿತ ಹೋರಾಟ ನಡೆಸಬೇಕು.
ಭವ್ಯ ಭಾರತ ನಿರ್ಮಾಣಕ್ಕಾಗಿ ಶಿಕ್ಷಕರು ಮಕ್ಕಳನ್ನು ಸತ್ಪ್ರಜೆ ರೂಪಿಸುವ ಜವಾಬ್ದಾರಿ ನಿರ್ವಹಿಸಬೇಕು. ಆಗ ಮಾತ್ರ ಹಿರಿಯರು ಗಳಿಸಿ ಕೊಟ್ಟ ಸಂವಿಧಾನ ಮತ್ತು ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತದೆ ಎಂದರು.
ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ಶಾಸಕ ಕೆ.ಬಿ. ಚಂದ್ರಶೇಖರ್ ಬಹುಮಾನ ವಿತರಣೆ ಮಾಡಿದರು. ವಿವಿಧ ಶಾಲೆಗಳ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು. ಕಾರ್ಯಕ್ರಮಕ್ಕೂ ಮುನ್ನ ಟಿಬಿ ವೃತ್ತದಿಂದ ಮಾಧ್ಯಮಿಕ ಶಾಲಾ ಆವರಣವರೆಗೂ ಮೆರವಣಿಗೆ ನಡೆಸಲಾಯಿತು.
ಗ್ರೇಡ್-2 ತಹಸೀಲ್ದಾರ್ ಸತ್ಯಭಾಮ ಧ್ವಜಾರೋಹಣ ನೇರವೇರಿಸಿದರು. ಕಾರ್ಯಕ್ರಮದಲ್ಲಿ ಮೈಸೂರು ಲ್ಯಾಂಪ್ಸ್ ಕಂಪನಿ ಮಾಜಿ ಅಧ್ಯಕ್ಷ ಬಿ.ಎಲ್. ದೇವರಾಜು, ತಾಪಂ ಅಧ್ಯಕ್ಷೆ ಮಂಜುಳಾ, ಪುರಸಭೆ ಅಧ್ಯಕ್ಷೆ ಪುಟ್ಟಸಿದ್ದಮ್ಮ, ಉಪಾಧ್ಯಕ್ಷೆ ಮಂಜುಳಾ, ಮುಖ್ಯಾಧಿಕಾರಿ ಎಚ್.ಎಸ್. ನಾಗರಾಜು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.