'ಜನಸಂಖ್ಯೆಗೆ ಅನುಸಾರ ಆಹಾರೋತ್ಪಾದನೆ ಅಗತ್ಯ'
ಮಂಡ್ಯ: ಜನಸಂಖ್ಯೆ ಹೆಚ್ಚಳಕ್ಕೆ ಅನುಗುಣವಾಗಿ ಆಹಾರ ಉತ್ಪಾದನೆ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಗಂಭೀರ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಮೈಸೂರಿನ ಮಾನಸ ಗಂಗೋತ್ರಿ ಜೈವಿಕ ತಂತ್ರಜ್ಞಾನ ವಿಭಾಗದ ಸಹ ಪ್ರಾಧ್ಯಾಪಕ ಡಾ.ಎಸ್. ಉಮೇಶ್ ಹೇಳಿದರು.
ಅವರು ಗುರುವಾರ ನಗರದ ಹೊರವಲಯದಲ್ಲಿರುವ ಜ್ಞಾನಸಾಗರ ಕ್ಯಾಂಪಸ್‌ನಲ್ಲಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಮಾಂಡವ್ಯ ಪ್ರಥಮ ದರ್ಜೆ ಕಾಲೇಜು ವತಿಯಿಂದ ಆಯೋಜಿಸಿದ್ದ 2013ರ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜನಸಂಖ್ಯೆಯು ಬಯೋವುಟ್ರಿಕ್ ರೀತಿಯಲ್ಲಿ ಏರಿಕೆಯಾಗುತ್ತಿದೆ. ಆಹಾರ ಉತ್ಪಾದನೆ ಮಂದಗತಿಯಲ್ಲಿ ಏರಿಕೆಯಾಗುತ್ತಿದೆ. ಆದ್ದರಿಂದ ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದರು.
ಸರ್ ಸಿ.ವಿ.ರಾಮನ್ ಅವರಿಗೆ ನೋಬೆಲ್ ಪಾರಿತೋಷಕ ದೊರೆತ ದಿನದ ನೆನಪಿಗಾಗಿ ಫೆ.28ರಂದು ದೇಶಾದ್ಯಂತ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಗುತ್ತಿದೆ. ಈ ವರ್ಷ ತಳಿ ಪರಿವರ್ತಿತ ಬೆಳೆಗಳು ಮತ್ತು ಆಹಾರ ಭದ್ರತೆ ವಿಷಯವನ್ನು ಆಯ್ದುಕೊಂಡು ಆಹಾರ ಭದ್ರತೆ ಕಾಪಾಡಿಕೊಳ್ಳುವಲ್ಲಿ ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಹೇಳಿದರು.
ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವೈಜ್ಞಾನಿಕ ಅಧಿಕಾರಿ ವಿ.ಕೆ. ಶ್ರೀನಿವಾಸ್, ಪ್ರೇಮಿಗಳ ದಿನಾಚರಣೆ ಬಗ್ಗೆ ತಿಳಿದಿರುವ ಯುವಜನತೆಗೆ ವಿಜ್ಞಾನ ದಿನಾಚರಣೆ ಬಗ್ಗೆ ತಿಳಿದಿರುವುದಿಲ್ಲ. ಪ್ರತಿಯೊಬ್ಬರು ಶಿಕ್ಷಣ ಪಡೆದು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ವಿ.ಸಿ. ಫಾರಂನ ತಳಿ ಅಭಿವೃದ್ಧಿ ವಿಭಾಗದ ಮುಖ್ಯಸ್ಥ ಪ್ರೊ.ಎಚ್.ಸಿ. ಲೋಹಿತಾಶ್ವ ಉಪನ್ಯಾಸ ನೀಡಿದರು. ಮಾಂಡವ್ಯ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲೆ ಮೀರಾ ಶಿವಲಿಂಗಯ್ಯ ಅಧ್ಯಕ್ಷತೆ ವಹಿಸಿದ್ದರು. ಎಸ್.ಬಿ. ಎಜುಕೇಷನ್ ಟ್ರಸ್ಟ್ ಕಾರ್ಯಾಧ್ಯಕ್ಷ ಡಾ.ಬಿ. ಶಿವಲಿಂಗಯ್ಯ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸದಸ್ಯ ಡಾ.ರಾಮಲಿಂಗಯ್ಯ, ಸಂಸ್ಥೆ ಆಡಳಿತಾಧಿಕಾರಿ ಕೆ. ಶಂಭುಗೌಡ, ಶಿವಣ್ಣ, ಶ್ರೀನಿವಾಸ್ ಇದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.