ಸಂಹಿತೆ ಉಲ್ಲಂಘನೆಯಾಗದಂತೆ ಜಾಗೃತಿ ವಹಿಸಿ: ಡಿಸಿ
ಮಂಡ್ಯ: ಸ್ಥಳೀಯ ಸಂಸ್ಥೆಗಳ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳು ಸಂಭವಿಸುವ ಸಾಧ್ಯತೆಗಳಿದ್ದು, ನೀತಿ ಸಂಹಿತೆ ಪರಿಶೀಲನಾ ತಂಡ ಸದಾ ಜಾಗೃತವಾಗಿರುವಂತೆ ಜಿಲ್ಲಾ ದಂಡಾಧಿಕಾರಿ ಬಿ.ಎನ್. ಕೃಷ್ಣಯ್ಯ ಹೇಳಿದರು.
ಭಾನುವಾರ ಚುನಾವಣಾಧಿಕಾರಿಗಳು, ಕಂದಾಯ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಸೇರಿದಂತೆ ಚುನಾವಣೆಗೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳ ಸಭೆಯನ್ನು ಅವರು ನಡೆಸಿದರು.
ವಲಯ ದಂಡಾಧಿಕಾರಿಗಳು ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದ ದೂರುಗಳನ್ನು ಪೊಲೀಸರಿಗೆ ನೀಡಬೇಕು. ಲಿಕ್ಕರ್ ಅಂಗಡಿಗಳ ಚಲನವಲನಗಳ ಮೇಲೆ ನಿಗಾ ವಹಿಸಬೇಕು. ಲೆಕ್ಕ ಪರಿಶೋಧನ ತಂಡವು ಅಭ್ಯರ್ಥಿಗಳಿಗೆ ಹಾಗೂ ಕಂದಾಯ ಅಧಿಕಾರಿಗಳಿಗೆ ಲೆಕ್ಕ ಪರಿಶೋಧನೆಯ ಬಗ್ಗೆ ಸೂಕ್ತ ಸಲಹೆ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಿ.ಸಿ.ಜಯಣ್ಣ, ಮಸ್ಟರಿಂಗ್ ಹಾಗೂ ಡಿಮಸ್ಟರಿಂಗ್ ಕಾರ್ಯಗಳನ್ನು ಕೈಗೊಳ್ಳುವ ಕುರಿತು ಹಾಗೂ ಎಣಿಕೆ ಸಂದರ್ಭದಲ್ಲಿ ಅನುಸರಿಸಬೇಕಾದ ಮುಂಜಾಗೃತ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರು.
ಪೊಲೀಸ್ ಇಲಾಖೆ ವತಿಯಿಂದ ಅತಿಸೂಕ್ಷ್ಮ ಮತಗಟ್ಟೆ ಎಂದು ಗುರುತಿಸಲಾದ ಮತಗಟ್ಟೆಯಲ್ಲಿ ಒಂದು ಸಾವಿರಕ್ಕೂ ಹೆಚ್ಚು ಮತದಾರರಿದ್ದರೆ ಅಂಥ ಮತಗಟ್ಟೆಗಳಲ್ಲಿ ವೀಡಿಯೋಗ್ರಫಿ ಮಾಡಿಸುವಂತೆ ಅಧಿಕಾರಿಗಳಿಗೆ ಚುನಾವಣಾ ತಹಶೀಲ್ದಾರರು ತಿಳಿಸಿದರು.
ಕಳ್ಳಭಟ್ಟಿ ಹಾಗೂ ನಕಲಿ ಮದ್ಯದ ಸರಬರಾಜು ಆಗುವ ಸಂಭವವಿದ್ದು, ಈ ಬಗ್ಗೆ ಅಬಕಾರಿ ಇಲಾಖೆ ಎಚ್ಚರ ವಹಿಸಬೇಕು. ಪೊಲೀಸ್ ಅಧಿಕಾರಿಗಳು ಅಕ್ರಮ ಮದ್ಯ ಕಡಿವಾಣಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಭೂಷಣ ಜಿ. ಬೊರಸೆ ಹೇಳಿದರು.
ಅಪರ ಜಿಲ್ಲಾಧಿಕಾರಿ ಶಂಕರಪ್ಪ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎ.ಎನ್.ರಾಜಣ್ಣ ಮತ್ತಿತರರು ಉಪಸ್ಥಿತರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.