ಖಾಸಗಿಗೆ ಭೂ ಸ್ವಾಧೀನ ಬೇಡ
ಮಂಡ್ಯ: ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ನಗರದಲ್ಲಿ ರಸ್ತೆತಡೆ ನಡೆಸಿ ಬುಧವಾರ ಪ್ರತಿಭಟನೆ ನಡೆಸಿದರು.
ನಗರದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಸೇರಿದ ರೈತರು, ನಂತರ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ರಸ್ತೆತಡೆ ನಡೆಸಿ ಪ್ರತಿಭಟಿಸಿದರು.
ಈಗಾಗಲೇ ವಿವಿಧ ಯೋಜನೆಗಳಿಗೆ ಭೂಸ್ವಾಧೀನಪಡಿಸಿಕೊಂಡಿರುವ ಕಡೆ ಒಕ್ಕಲೆಬ್ಬಿಸಿರುವ ರೈತ ಕುಟುಂಬಗಳಿಗೆ ಸಂಪೂರ್ಣ ಪರಿಹಾರ ನೀಡುವವರೆಗೆ ಭೂಸ್ವಾಧೀನ ಪ್ರಕ್ರಿಯೆ ನಿಲ್ಲಿಸಬೇಕು. ಯಾವ ಖಾಸಗಿ ಯೋಜನೆಗಳಿಗೂ ಭೂಸ್ವಾಧೀನ ಮಾಡಿಕೊಳ್ಳಬಾರದು ಎಂದು ಒತ್ತಾಯಿಸಿದರು.
ಮಾರುಕಟ್ಟೆ ಅಭದ್ರತೆ, ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಆಗುವ ಹಾನಿ, ಮೋಸದ ಬೀಜಗಳಿಂದಾಗುವ ನಷ್ಟ ಇನ್ನಿತರ ಕಾರಣಗಳಿಂದಾಗಿ ರೈತರು ಆತ್ಮಹತ್ಯೆ ದಾರಿ ಹಿಡಿಯುತ್ತಿದ್ದಾರೆ. ರೈತರಿಗೆ ಕಾರ್ಖಾನೆಗಳ ಕಾರ್ಮಿಕರಿಗೆ ಎಲ್ಲಾ ಸೌಲಭ್ಯ ಸಿಗಲು ಕೃಷಿ ವೇತನ ಆಯೋಗ ರಚಿಸಬೇಕು ಎಂದು ಆಗ್ರಹಿಸಿದರು.
ಕಾರ್ಮಿಕರಿಗೆ ಮತ್ತು ರೈತರಿಗೆ ಮಾಸಿಕ ಪಿಂಚಣಿ ನೀಡಬೇಕು. ಬೆಳೆಗಳಿಗೆ ವೈಜ್ಞಾನಿಕ ಬೆಳೆ ನೀತಿ ಜಾರಿಗೆ ತರಬೇಕು. ರೈತರ ಎಲ್ಲಾ ಸಾಲ ಮನ್ನಾ ಮಾಡಬೇಕು. ಕೃಷಿ ಕ್ಷೇತ್ರಕ್ಕೆ ಪ್ರತ್ಯೇಕ ಕೇಂದ್ರ ಬಜೆಟ್ ಜಾರಿಯಾಗಬೇಕು. ಚಿಲ್ಲರೆ ವ್ಯಾಪಾರದಲ್ಲಿ ವಿದೇಶಿ ಹೂಡಿಕೆ ಮತ್ತು ವ್ಯಾಪಾರ ಒಪ್ಪಂದ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ರೈತ ಮುಖಂಡರಾದ ವಿ.ಅಶೋಕ್, ಬೊಮ್ಮೇಗೌಡ, ಹಲ್ಲೇಗೆರೆ ಶಿವರಾಮು, ಮರಿಲಿಂಗೇಗೌಡ, ಸುರೇಶ್, ಚನ್ನೇಗೌಡ ಸೇರಿದಂತೆ ಹಲವರು ಭಾಗವಹಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.