ಕ್ಷಯರೋಗ ಹರಡಲು ಅರಿವು ಕೊರತೆ ಕಾರಣ
ಕ.ಪ್ರ.ವಾರ್ತೆ, ಮಂಡ್ಯ, ಮಾ.25
ಬಡತನ, ಅರಿವಿನ ಕೊರತೆಯಿಂದಾಗಿ ಕ್ಷಯರೋಗ ಹೆಚ್ಚಾಗಿ ಹರಡುತ್ತಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಿ.ಶಿವಲಿಂಗೇಗೌಡ ಆತಂಕ ವ್ಯಕ್ತಪಡಿಸಿದರು.
ನಗರದ ಕಲಾ ಮಂದಿರದಲ್ಲಿ ಜಿಲ್ಲಾ ಪಂಚಾಯ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ, ಜಿಲ್ಲಾ ಕ್ಷಯರೋಗ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಕ್ಷಯರೋಗ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ದೇಶದಲ್ಲಿ ಪ್ರತಿವರ್ಷ 20 ಲಕ್ಷ ಮಂದಿ ಕ್ಷಯ ರೋಗಕ್ಕೆ ತುತ್ತಾಗುತ್ತಿದ್ದಾರೆ. ಒಂದೂವರೆ ನಿಮಿಷಕ್ಕೆ ಒಬ್ಬರಂತೆ ರೋಗ ಪೀಡಿತರಾಗುತ್ತಿದ್ದಾರೆ. ಇದಕ್ಕೆ ಬಡತನ, ಅನಕ್ಷರತೆ, ಅರಿವಿನ ಕೊರತೆ, ಜನರ ಹಿಂಜರಿಕೆ ಮನೋಭಾವವೇ ಕಾರಣ ಎಂದರು. ಕ್ಷಯ ರೋಗದಿಂದಾಗಿ ದುಡಿಯುವ ಸಾಮರ್ಥ್ಯ ಕಡಿಮೆಯಾಗುತ್ತಿದೆ. ಇದರಿಂದ ದೇಶಕ್ಕೆ ಪ್ರತಿವರ್ಷ ಸಾವಿರಾರು ಕೋಟಿ ರು. ಆರ್ಥಿಕ ನಷ್ಟ ಉಂಟಾಗುತ್ತಿದೆ. ರೋಗ ಪೀಡಿತ ಪೋಷಕರಿಂದಾಗಿ ಮಕ್ಕಳ ಭವಿಷ್ಯದ ಮೇಲೂ ದುಷ್ಪರಿಣಾಮ ಬೀರುತ್ತಿದೆ ಎಂದು ವಿಷಾದಿಸಿದರು. ಮನುಷ್ಯ ತನ್ನ ಆರೋಗ್ಯದ ಬಗ್ಗೆ ಕಾಳಜಿ ವಹಿಸದಿರುವುದು ವಿಷಾದನೀಯ ಎಂದರು.
ದೇ ಸಂದರ್ಭ ಕ್ಷಯರೋಗ ಕುರಿತ ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಲಾಯಿತು. ಡಿಎಚ್ಒ ಡಾ.ಟಿ.ಎನ್.ಮರೀಗೌಡ ಅಧ್ಯಕ್ಷತೆ ವಹಿಸಿದ್ದರು. ಮಿಮ್ಸ್ ಸಹಾಯಕ ಪ್ರಾಧ್ಯಾಪಕರಾದ ಡಾ.ವಿನಯ್, ಡಾ. ಎಸ್.ಕೆ. ಮಹದೇವು, ಡಿಎಚ್ಒ ಕಚೇರಿಯ ಡಿಪಿಎಂ ಡಾ.ರೋಚನಾ, ಡಾ.ಸಿದ್ದೇಗೌಡ ಉಪಸ್ಥಿತರಿದ್ದರು.
ಸಮಾರಂಭಕ್ಕೂ ಮೊದಲು ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಕಾವೇರಿ ವನದಲ್ಲಿರುವ ಸರ್ಎಂವಿ ಪ್ರತಿಮೆ ಬಳಿಯಿಂದ ವಿಶ್ವ ಕ್ಷಯರೋಗ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಗೆ ಜಿಲ್ಲಾಧಿಕಾರಿ ಬಿ.ಎನ್. ಕೃಷ್ಣಯ್ಯ ಚಾಲನೆ ನೀಡಿದರು. ಮಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳು, ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.