ಪಿಜಿ ಶುಲ್ಕ ವಸೂಲು ಮಾಡದಂತೆ ಮನವಿ
ಮೈಸೂರು: ಪ್ರಸಕ್ತ ಸಾಲಿನ ಸ್ನಾತಕೋತ್ತರ ಕೋರ್ಸಿಗೆ ಪ್ರವೇಶಾತಿ ಪಡೆಯುವ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿಗಳಿಂದ ಯಾವುದೇ ಶುಲ್ಕ ವಸೂಲು ಮಾಡದಂತೆ ದಲಿತ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಹಾರೋಹಳ್ಳಿ ರವೀಂದ್ರ ಅವರು ಮೈಸೂರು ವಿವಿ ಕುಲ ಸಚಿವರಲ್ಲಿ ಮನವಿ ಮಾಡಿದ್ದಾರೆ.ರಾಜ್ಯದ ವಿವಿಗಳು ಎಸ್ಸಿ, ಎಸ್ಟಿ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿರುವ ವಿವಿಧ ಕೋರ್ಸುಗಳಿಗೆ ಪ್ರವೇಶಾತಿ ಸಂದರ್ಭದಲ್ಲಿ ಶುಲ್ಕ ಪಾವತಿಸುವಂತೆ ಒತ್ತಾಯಿಸಬಾರದು ಎಂದು ರಾಜ್ಯ ಸರ್ಕಾರ 2012ರಲ್ಲಿ ಆದೇಶ ನೀಡಿದೆ. ಆದರೆ, ಮೈಸೂರು ವಿವಿ ಈ ಆದೇಶವನ್ನು ಉಲ್ಲಂಘಿಸಿ ಸ್ನಾತಕ, ಸ್ನಾತಕೋತ್ತರ, ಡಿಪ್ಲೊಮಾ ಕೋರ್ಸಿಗೆ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳಿಂದ ಶುಲ್ಕ ಪಡೆಯುತ್ತಿದೆ. ಹಾಗೆಯೇ ದ್ವಿತೀಯ ಸ್ತಾತಕೋತ್ತರ ಪದವಿಗೆ ಪ್ರವೇಶಾತಿ ಪಡೆಯಲು ಆ.5 ಕೊನೆಯ ದಿನವಾದ್ದರಿಂದ ಎಲ್ಲಾ ವಿದ್ಯಾರ್ಥಿಗಳಿಂದ ಶುಲ್ಕ ವಸೂಲಿ ಮಾಡಲಾಗಿದೆ. ಮೈಸೂರು ವಿವಿ ಕುಲ ಸಚಿವರು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.