ಜೆಡಿಎಸ್- ಬಿಜೆಪಿ ಮೈತ್ರಿ ವಿರುದ್ಧ ಪ್ರತಿಭಟನೆ
ಕ.ಪ್ರ.ವಾರ್ತೆ , ಮೈಸೂರು , ಆ. 18
ಉಪ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್, ಬಿಜೆಪಿ, ಕೆಜೆಪಿ ಅಪವಿತ್ರ ಮೈತ್ರಿಯನ್ನು ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ಪ್ರತಿಭಟಿಸಿದರು.
ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಗಾಂಧಿ ಚೌಕದವರೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ಪ್ರತಿಕೃತಿಗಳನ್ನು ಚಟ್ಟದಲ್ಲಿ ಮೆರವಣಿಗೆ ನಡೆಸಿದರು. ಬಳಿಕ ಗಾಂಧಿ ಚೌಕದಲ್ಲಿ ಪ್ರತಿಕೃತಿಗಳನ್ನು ದಹಿಸಿದರು.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ಜೆಡಿಎಸ್ ಪಕ್ಷಕ್ಕೆ ಜಾತ್ಯತೀತ ಎಂಬ ಹಣೆಪಟ್ಟಿ ಹೊಂದುವ ಯಾವುದೇ ನೈತಿಕತೆ ಇಲ್ಲ. ಜಾತ್ಯತೀತ ಎಂಬ ಅಡಿಬರಹ ಹೊಂದಿರುವ ಜೆಡಿಎಸ್ ಕೋಮುವಾದಿ ಬಿಜೆಪಿ ಜತೆ ಮತ್ತೆ ಮೈತ್ರಿ ಮಾಡಿಕೊಂಡಿದ್ದಾರೆ. ಈ ಮೂಲಕ ಜಾತ್ಯತೀತ ತತ್ವಕ್ಕೆ ಎಳ್ಳು ನೀರು ಬಿಟ್ಟಿದ್ದಾರೆ ಎಂದು ಅವರು ಆರೋಪಿಸಿದರು.
ಉಪ ಚುನಾವಣೆ ನೆಪದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಮತ್ತೆ ಒಂದಾಗಿದ್ದಾರೆ. ಅಧಿಕಾರಕ್ಕಾಗಿ ಜೆಡಿಎಸ್ ಯಾವುದೇ ನಾಟಕ ಮಾಡಲು ಸಿದ್ದವಾಗಿದೆ. ರಾಜ್ಯದಲ್ಲಿ ಬಿಜೆಪಿ ನೆಲೆಕಾಣಲು ಜೆಡಿಎಸ್ ಪಕ್ಷದವರು ಕಾರಣ ಎಂದು ಅವರು ದೂರಿದರು. ಯುವ ಕಾಂಗ್ರೆಸ್ ಮುಖಂಡ ಕೈಸರ್ ಅಹಮ್ಮದ್ ನೇತೃತ್ವ ವಹಿಸಿದ್ದರು.