ಪ್ರತ್ಯೇಕ ಪ್ರಕರಣ ಮೂವರ ಆತ್ಮಹತ್ಯೆ
ಮೈಸೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮನನೊಂದ ಗೃಹಿಣಿಯೊಬ್ಬರು ಸಂಪಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ. ಜೆ.ಪಿ. ನಗರ ಬಳಿಯ ಮಹದೇವಪುರ ನಿವಾಸಿ ಸಂತೋಷ್‌ಕುಮಾರ್ ಎಂಬವರ ಪತ್ನಿ ಚೈತ್ರಾ(25) ಆತ್ಮಹತ್ಯೆ ಮಾಡಿಕೊಂಡವರು. ನಿನ್ನೆ ರಾತ್ರಿ ಸಂತೋಷ್ ಮತ್ತು ಚೈತ್ರಾ ಜಗಳವಾಡಿದ್ದು, ಬೆಳಗ್ಗೆ ಚೈತ್ರಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯಾರಣ್ಯಪುರಂ ಠಾಣೆಯ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕು ಮಲೆ ಮಹದೇಶ್ವರಬೆಟ್ಟ ನಿವಾಸಿ ಶಿವಣ್ಣರಾಜು (30) ಆತ್ಮಹತ್ಯೆ ಮಾಡಿಕೊಂಡವರು. ವಿದ್ಯಾರಣ್ಯಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಬಿಇ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ. ಗುಂಡೂರಾವ್‌ನಗರ ನಿವಾಸಿ ಶಾಂತರಾಜೇ ಅರಸ್ ಎಂಬವರ ಪುತ್ರಿ ವಿನುತಾ ಅರಸ್(19) ಆತ್ಮಹತ್ಯೆ ಮಾಡಿಕೊಂಡವರು. ವಿದ್ಯಾರಣ್ಯಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಂಗ್ರೆಸ್ ಗೆಲವು: ಕಾರ್ಯಕರ್ತರ ಸಂಭ್ರಮ
ಕ.ಪ್ರ.ವಾರ್ತೆ ಮೈಸೂರು ಆ. 24
ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯ ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಡಿ.ಕೆ.ಸುರೇಶ್ ಮತ್ತು ರಮ್ಯಾ ಜಯ ಗಳಿಸಿದ ಹಿನ್ನೆಲೆಯಲ್ಲಿ ಮೈಸೂರಿನ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಸಂಭ್ರಮ ಆಚರಿಸಿದರು.
ನಗರದ ಸಯ್ಯಾಜಿರಾವ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಬಳಿ ಜಮಾಯಿಸಿದ ಕಾರ್ಯಕರ್ತರು, ಪಟಾಕಿ ಸಿಡಿಸಿ ಜೈಕಾರ ಕೂಗಿದರು. ಬಳಿಕ ಸಾರ್ವಜನಿಕರಿಗೆ ಸಿಹಿ ಹಂಚಿದರು.
ಮುಖಂಡರಾದ ಶ್ರೀನಾಥ್ ಬಾಬು, ಬಸವಣ್ಣ, ನಗರಪಾಲಿಕೆ ಮಾಜಿ ಸದಸ್ಯ ಅಶೋಕ್, ಮೈಸೂರು ತಾಪಂ ಮಾಜಿ ಅಧ್ಯಕ್ಷೆ ಮಂಜುಳ ಮಂಜುನಾಥ್ ಇದ್ದರು.