ಪ್ರೊ.ಶಿವರಾಮು ಕಾಡನಕುಪ್ಪೆ ಇಂದು ನಿವೃತ್ತಿ
ಕ.ಪ್ರ.ವಾರ್ತೆ , ಮೈಸೂರು , ಆ. 30
ಪ್ರತಿಷ್ಠಿತ ವಿದ್ಯಾವರ್ಧಕ ಸಂಘದ ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದ ಪ್ರೊ.ಶಿವರಾಮು ಕಾಡನಕುಪ್ಪೆ ಆ.31 ರಂದು ನಿವೃತ್ತಿಯಾಗಲಿದ್ದಾರೆ.
ಕಳೆದ 38 ವರ್ಷಗಳಿಂದ ಅಧ್ಯಾಪಕರಾಗಿ, ಪ್ರಾಧ್ಯಾಪಕರಾಗಿ, ಪ್ರಾಂಶುಪಾಲರಾಗಿ ವಿವಿಧ ಶೈಕ್ಷಣಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಅವರು, ಸಾಹಿತಿಗಳಾಗಿಯೂ ಅನೇಕ ಕೃತಿಗಳನ್ನು ರಚಿಸಿ ಪ್ರಸಿದ್ಧಿ ಪಡೆದಿದ್ದಾರೆ.
ನಿವೃತ್ತಿಯ ನಂತರ ತಮ್ಮ ಮುಂದಿನ ಜೀವನವನ್ನು ಸಾಹಿತ್ಯಿಕ, ವೈಚಾರಿಕ ಬರವಣಿಗೆಯಲ್ಲಿ ಹಾಗೂ ಪ್ರಗತಿಪರ ಹೋರಾಟದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವ ಇಂಗಿತವನ್ನು ವ್ಯಕ್ತಪಡಿಸಿರುವ ಕಾಡನಕುಪ್ಪೆ ಅವರು, ತಮ್ಮ ಸೇವಾವಧಿಯಲ್ಲಿ ಸಹಕರಿಸಿದ ಶಿಕ್ಷಣ ಪ್ರೇಮಿಗಳು, ಅಧ್ಯಾಪಕರು, ವಿದ್ಯಾರ್ಥಿಗಳು, ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ, ಮೈಸೂರು ವಿವಿ ಹಾಗೂ ಕಾಲೇಜು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.