ಬಿಇಒ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ
ಟಿ. ನರಸೀಪುರ: ಶಿಕ್ಷಣ ಸಂಯೋಜಕಿ ಎಸ್. ರೂಪಾ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಮಾನಸಿಕ ಕಿರುಕುಳ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎ. ಲೋಕೇಶ್ ಅವರ ಬಂಧನಕ್ಕೆ ಆಗ್ರಹಿಸಿ ಪಟ್ಟಣದಲ್ಲಿ ಶುಕ್ರವಾರ ವಿವಿಧ ಸಂಘಟನೆಗಳು ಮತ್ತು ಶಿಕ್ಷಕರು ಬೃಹತ್ ಪ್ರತಿಭಟನೆ ನಡೆಸಿದರು.
ಇಲ್ಲಿನ ವಿದ್ಯೋದಯ ಕಾಲೇಜು ವೃತ್ತದಲ್ಲಿ ವೀರಶೈವ ಮಹಾಸಭಾದ ಮುಖಂಡರು, ರೈತ ಸಂಘ ಹಾಗೂ ಪ್ರೌಢಶಾಲಾ ಶಿಕ್ಷಕರ ಸಂಘದ ಶಿಕ್ಷಕರು ಆರೋಪಿ ಕ್ಷೇತ್ರ ಶಿಕ್ಷಣಾಧಿಕಾರಿಯನ್ನು ಬಂಧಿಸುವಂತೆ ಆಗ್ರಹಿಸಿ ಧಿಕ್ಕಾರ ಘೋಷಣೆ ಕೂಗಿ ಪ್ರತಿಭಟಿಸಿದರು.
ತಾ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ತೆರಳಿದ ಪ್ರತಿಭಟನಾಕಾರರು ಕಚೇರಿಗೆ ಬೀಗ ಹಾಕಿ ಶಿಕ್ಷಣ ಸಂಯೋಜಕಿಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳುವಂತೆ ಕಿರುಕುಳ ನೀಡಿದ ಅಧಿಕಾರಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಂತರ ತಹಸೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಲೋಕೇಶ್ ಅವರನ್ನು ಬಂಧಿಸಿ, ಕಠಿಣ ಶಿಕ್ಷೆ ವಿಧಿಸದಿದ್ದರೆ ಹೋಬಳಿ ಮಟ್ಟದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ವೀರಶೈವ ಮಹಾಸಭಾದ ಅಧ್ಯಕ್ಷ ಕೆ.ಜಿ. ಶಿವಪ್ರಸಾದ್, ಪ್ರಧಾನ ಕಾರ್ಯದರ್ಶಿ ಕೆ.ಎಂ. ಶಾಂತರಾಜು, ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶಿವಸ್ವಾಮಿ, ಹೋಟೆಲ್ ರಾಜಣ್ಣ, ಕಸಾಪ ಅಧ್ಯಕ್ಷ ಆರ್. ನಾಗೇಂದ್ರಕುಮಾರ್, ಪ್ರಾಂಶುಪಾಲ ಕುಮಾರಸ್ವಾಮಿ, ರೈತ ಸಂಘದ ಅಧ್ಯಕ್ಷ ಮಹದೇವ, ಮುಖಂಡರಾದ ಉಮೇಶ್, ಮಹಾಂತಪ್ಪ ನಾಗೂರು, ಪುಟ್ಟಬುದ್ಧಿ, ವೈ.ಎಸ್. ಸೋಮಣ್ಣ ನೂರಾರು ಮಂದಿ ಶಿಕ್ಷಕರು ಭಾಗವಹಿಸಿದ್ದರು.