'ಖಾತ್ರಿ ಯೋಜನೆ ಸಮರ್ಪಕ ಬಳಸಿಯಾಗಲಿ'
ಪಿರಿಯಾಪಟ್ಟಣ: ಗ್ರಾಪಂಗಳು ಉದ್ಯೋಗ ಖಾತ್ರಿ ಯೋಜನೆ ಸಮರ್ಪಕವಾಗಿ ಬಳಸಿಕೊಂಡಿದ್ದಲ್ಲಿ ಗ್ರಾಮಗಳ ಅಭಿವೃದ್ಧಿ ಸಮರೋಪಾದಿಯಲ್ಲಿ ಸಾಗುತ್ತಿತ್ತು ಎಂದು ಶಾಸಕ ಕೆ.ವೆಂಕಟೇಶ್ ಹೇಳಿದರು.
ತಾಲೂಕಿನ ಗಿರಗೂರು ಗ್ರಾಮದಲ್ಲಿ 10 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಪ್ರತಿಯೊಂದು ಅಭಿವೃದ್ಧಿ ಕಾರ್ಯಗಳನ್ನು ಸಹಾ ಕೇವಲ ಶಾಸಕರ ನಿಧಿಯಿಂದ ಮಾತ್ರ ನಿರ್ವಹಿಸಲು ಸಾಧ್ಯವಿಲ್ಲ. ಸರ್ಕಾರಗಳು ವಿವಿಧ ಹಂತಗಳಲ್ಲಿ ವಿವಿಧ ಯೋಜನೆಗಳ ಮೂಲಕ ಹಲವಾರು ಅಭಿವೃದ್ಧಿ ಕೆಲಸಗಳಿಗಾಗಿ ಹಣ ಬಿಡುಗಡೆ ಮಾಡುತ್ತದೆ. ಅದನ್ನು ಸ್ಥಳೀಯ ಮಟ್ಟದ ಚುನಾಯಿತ ಪ್ರತಿನಿಧಿಗಳು ಸಮರ್ಪಕವಾಗಿ ಬಳಸಿ ಕಾರ್ಯನಿರ್ವಹಿಸಿದ್ದಲ್ಲಿ ಉತ್ತಮ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ನೆರವೇರಿಸಲು ಸಾಧ್ಯ ಎಂದು ತಿಳಿಸಿದರು.
ಚುನಾವಣೆಯು ಎರಡು ತಿಂಗಳಲ್ಲಿ ಬರಲಿದ್ದು, ಪ್ರಸ್ತುತ ಸರ್ಕಾರ ಯಾವುದೇ ವಿಶೇಷ ಅನುದಾನವನ್ನಾಗಲಿ ಅಥವಾ ಇತರೆ ಯಾವುದೆ ಯೋಜನೆಗಳನ್ನು ರೂಪಿಸುವ ಲಕ್ಷಣಗಳು ಕಂಡು ಬರುತ್ತಿಲ್ಲ, ಇಂತಹ ಸ್ಥಿತಿಯಲ್ಲಿ ತಾವು ಮತದಾರರಿಗೆ ಕೆಲಸ ಮಾಡಿಸಿಕೊಡುವ ಸುಳ್ಳು ಭರವಸೆಯನ್ನು ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಜಿಪಂ ಸದಸ್ಯೆ ಮಂಜುಳಾ ರಾಜ್ ಮಾತನಾಡಿದರು. ತಾಲೂಕಿನ ವಿವಿಧ ಗ್ರಾಮಗಳಲ್ಲಿ 1.91 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಜಿಪಂ ಸದಸ್ಯೆ ಕಾವೇರಿ ಶೇಖರ್, ತಾಪಂ ಸದಸ್ಯ ಮಹದೇವ್, ಗ್ರಾಪಂ ಮಾಜಿ ಅಧ್ಯಕ್ಷ ಮಕ್ಬುಲ್, ಗ್ರಾಪಂ ಸದಸ್ಯೆ ಅಂಬುಜಮ್ಮ, ಲಕ್ಷ್ಮೇಗೌಡ, ಇಒ ಕಾಂತರಾಜ್ ಇತರರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.