ಮರಳಿಗೆ ಅಧಿಕ ಹಣ ಪಡೆದರೆ ಕಠಿಣ ಕ್ರಮ
ಕ.ಪ್ರ.ವಾರ್ತೆ ಮೈಸೂರು ಜು. 12
ಒಂದು ಲೋಡ್ ಮರಳಿಗೆ 7,850 ನಿಗದಿ ಪಡಿಸಿದ್ದು, ಇದಕ್ಕಿಂತ ಹೆಚ್ಚು ಹಣ ಪಡೆದು ಮರಳು ನೀಡಿದ್ದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ರಾಮೇಗೌಡ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಸಂಜೆ ನಜೆದ ತುರ್ತು ಸಭೆಯಲ್ಲಿ ಮಾತನಾಡಿ, ಮರಳಿನ ಕೃತಕ ಅಭಾವ ಉಂಟುಮಾಡಿ ಅತಿ ಹೆಚ್ಚು ಹಣ ಪಡೆದು ಮರಳು ನೀಡುತ್ತಿದ್ದಾರೆ ಎಂಬ ದೂರು ಬಂದಿದ್ದು, ಈ ಹಿನ್ನೆಲೆ ಮರಳು ಸಾಗಾಣಿಕೆದಾರರು ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಜೊತೆ ಸಮಾಲೋಜಿಸಿದರು.
ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುವ ಲಾರಿಗಳನ್ನು ಕಪ್ಪುಪಟ್ಟಿಗೆ ಸೇರಿಸುವುದು, ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಹಾಗೂ ಅಕ್ರಮ ಮರಳು ದಾಸ್ತಾನನ್ನು ವಶಪಡಿಸಿಕೊಳ್ಳಲಾಗುತ್ತದೆ ಎಂದು ಹೇಳಿದರು.
ಮಂಡ್ಯ ಜಿಲ್ಲಾಧಿಕಾರಿ ಬಿ.ಎನ್. ಕೃಷ್ಣಯ್ಯ ಅವರ ಜೊತೆ ಚರ್ಚಿಸಲಾಗಿದ್ದು, ಮಂಡ್ಯ ಮೈಸೂರು ವ್ಯಾಪ್ತಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಮಂಡ್ಯ ಜಿಲ್ಲೆಯಿಂದಲೂ ಮರಳು ಪಡೆದುಕೊಂಡು ವಿತರಿಸಲಾಗುವುದು ಎಂದು ತಿಳಿಸಿದರು.