ಭರವಸೆ ಈಡೇರಿಸದ ರಾಜ್ಯ ಬಜೆಟ್: ದಸಂಸ ಆರೋಪ
ಮೈಸೂರು: ಕಾಂಗ್ರೆಸ್ ಸರ್ಕಾರವು ಚುನಾವಣೆಗೆ ಮುನ್ನ ದಲಿತರಿಗೆ ನೀಡಿದ್ದ ಭರವಸೆ ಈಡೇರಿಸಿಲ್ಲ ಎಂದು ದಸಂಸ ಆಕ್ಷೇಪಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಲಿತ, ರೈತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಪರ ಬಜೆಟ್ ಮಂಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ ಎಂದು ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕರಾದ ಶಂಭುಲಿಂಗಸ್ವಾಮಿ ಹಾಗೂ ಆಲಗೂಡು ಶಿವಕುಮಾರ್ ತಿಳಿಸಿದ್ದಾರೆ. ಚುನಾವಣೆಗೆ ಮುನ್ನ ದಸಂಸಕ್ಕೆ ಭರವಸೆ ನೀಡಿದ್ದಂತೆ ಆರ್ಥಿಕ ಕ್ಷೇತ್ರದಲ್ಲಿ ದಲಿತರಿಗೆ 22.75, ಗುತ್ತಿಗೆ ಕಾಮಗಾರಿಯಲ್ಲಿ ಮೀಸಲಾತಿ, ಸಹಕಾರಿ ಕ್ಷೇತ್ರದಲ್ಲಿ ಮೀಸಲಾತಿ ಕಲ್ಪಿಸುವುದು ಹಾಗೂ ಅಂಬೇಡ್ಕರ್ ಅಭಿವೃದ್ಧಿ ನಿಗಮವನ್ನು ಬ್ಯಾಂಕ್ ಆಗಿ ಪರಿವರ್ತಿಸುವುದು ಹಾಗೂ ಪರಿಶಿಷ್ಟಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಪರಿಶೀಲನೆಗೆ ಆಯೋಗ ರಚನೆಗೆ ಮುಂದಾಗದಿರುವುದು ಬೇಸರ ತಂದಿದೆ ಎಂದಿದ್ದಾರೆ.
ದಲಿತರ ಆರ್ಥಿಕ ಪ್ರಗತಿಗೆ ಪೂರಕವಾದ ಯೋಜನೆಗಳನ್ನು ಮುಂದಿನ ಬಜೆಟ್‌ನಲ್ಲಿಯಾದರೂ ಮಂಡಿಸಲಿ ಹಾಗೂ ಗ್ರಾಮ ಸಹಾಯಕರನ್ನು ಕಾಯಂಗೊಳಿಸಲು ಮುಂದಾಗಲಿ ಎಂದು ಆಗ್ರಹಿಸಿದ್ದಾರೆ.