ಕಟ್ಟಡಗಳಿಗೆ ದೀಪಾಲಂಕಾರ ಮಾಡಿ
ಮೈಸೂರು: ಸ್ವಾತಂತ್ರ್ಯ ದಿನಾಚರಣೆ ಮುನ್ನ ದಿನವಾದ ಆ. 14 ಮತ್ತು ಸ್ವಾತಂತ್ರ್ಯ ದಿನಾಚರಣೆಯ ಆ. 15ರಂದು ನಗರದ ಎಲ್ಲ ಸರ್ಕಾರಿ ಕಚೇರಿಗಳು, ಎಲ್ಲ ಅಂಗಡಿ ಮುಂಗಟ್ಟು ಮತ್ತಿತರ ಉದ್ದಿಮೆಗಳ ಕಟ್ಟಡಗಳಿಗೆ ವಿದ್ಯುತ್ ದೀಪಾಲಂಕಾರವನ್ನು ಸ್ವಯಂ ಸ್ಫೂರ್ತಿಯಿಂದ ಮಾಡುವಂತೆ ಜಿಲ್ಲಾಧಿಕಾರಿ ಡಾ. ರಾಮೇಗೌಡ ಮನವಿ ಮಾಡಿದ್ದಾರೆ.
ತಮ್ಮ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸ್ವಾತಂತ್ರ್ಯೋತ್ಸವ ದಿನಾಚರಣೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಅವರು, ಆ. 15ರ ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಓವಲ್ ಮೈದಾನದಲ್ಲಿ ಧ್ವಜಾರೋಹಣ, ಧ್ವಜವಂದನೆ ನಂತರ ಶಾಲಾ ಕಾಲೇಜು ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.
ಹಾಜರಾತಿ ಕಡ್ಡಾಯ: ಅಂದು ಬೆಳಗ್ಗೆ ಎಲ್ಲ ಅಧಿಕಾರಿಗಳು ತಮ್ಮ ತಮ್ಮ ಕಚೇರಿಗಳಲ್ಲಿ ಧ್ವಜಾರೋಹಣವನ್ನು ಬೆಳಗಿನ 8.30 ಗಂಟೆಯೊಳಗೆ ಕಡ್ಡಾಯವಾಗಿ ಮಾಡಬೇಕು. ಈ ನಂತರ ಬೆಳಗ್ಗೆ 9 ಗಂಟೆಗೆ ಓವಲ್ ಮೈದಾನದಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವದ ಮುಖ್ಯ ಸಮಾರಂಭಕ್ಕೆ ಎಲ್ಲ ಸಿಬ್ಬಂದಿಯೊಡನೆ ಹಾಜರಾಗಬೇಕು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಇರಿಸಲಾಗುವ ಹಾಜರಾತಿ ವಹಿಯಲ್ಲಿ ಕಡ್ಡಾಯವಾಗಿ ಸಹಿ ಮಾಡಬೇಕು. ಆ ದಿನ ಯಾವುದೇ ಸಿಬ್ಬಂದಿಗೆ ರಜೆ ಅಥವಾ ಅನುಮತಿ ನೀಡಬಾರದೆಂದು ಅಧಿಕಾರಿಗಳಿಗೆ ಸೂಚಿಸಿದರು.
ನಿಷೇಧ: ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪ್ಲಾಸ್ಟಿಕ್ ಮತ್ತು ಕಾಗದದ ರಾಷ್ಟ್ರ ಧ್ವಜವನ್ನು ಶಾಲಾ ಕಾಲೇಜು ವಿದ್ಯಾರ್ಥಿಗಳು ಬಳಸುತ್ತಿದ್ದು, ಸೂಕ್ತ ರೀತಿಯಲ್ಲಿ ಬಳಸದೆ ಇರುವುದರಿಂದ ರಾಷ್ಟ್ರ ಧ್ವಜಕ್ಕೆ ಅಗೌರವ ತೋರಿದಂತಾಗುತ್ತದೆ. ಅದನ್ನು ತಪ್ಪಿಸುವ ಉದ್ದೇಶದಿಂದ ಪ್ಲಾಸ್ಟಿಕ್ ಹಾಗೂ ಕಾಗದದ ರಾಷ್ಟ್ರ ಧ್ವಜವನ್ನು ಉಪಯೋಗಿಸದೆ ಎಲ್ಲರೂ ಖಾದಿ ಬಟ್ಟೆಯ ಧ್ವಜವನ್ನು ಬಳಸಬೇಕು. ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡುವ ಅಂಗಡಿ ಮಾಲೀಕರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಸಂಜೆ ಜಗನ್ಮೋಹನ ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಸ್ವಾತಂತ್ರ್ಯ ದಿನಾಚರಣೆಯ ಎರಡೂ ಕಾರ್ಯಕ್ರಮಗಳಿಗೆ ಶಾಲಾ ಕಾಲೇಜು ಮಕ್ಕಳು ಹಾಗೂ ಸಾರ್ವಜನಿಕರು ಭಾಗವಹಿಸಲು ಅನುಕೂಲವಾಗುವಂತೆ ಸಾರಿಗೆ ಇಲಾಖೆಯಿಂದ ಸೂಕ್ತ ಬಸ್ ವ್ಯವಸ್ಥೆ ಮಾಡುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ವಿವಿಧ ಇಲಾಖೆ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.