ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೆ ಡಿಸಿ ಸೂಚನೆ
ಕ.ಪ್ರ.ವಾರ್ತೆ ಮೈಸೂರು ಜು. 25
ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ವಿಧಾನ ಪರಿಷತ್ತಿನ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಸ್ಥಾನಕ್ಕೆ ಉಪ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸಿರುವ ಹಿನ್ನೆಲೆ, ಜು. 22ರಿಂದ ಜಾರಿಯಾಗಿರುವ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಕಟ್ಟು ನಿಟ್ಟಾಗಿ ಅನುಷ್ಠಾನಗೊಳಿಸಬೇಕೆಂದು ತಹಸೀಲ್ದಾರ್, ಆಯುಕ್ತರು ಹಾಗೂ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಿ. ಶಿಖಾ ಸೂಚಿಸಿದ್ದಾರೆ.
ಗುರುವಾರ ಚುನಾವಣೆಗೆ ಸಂಬಂಧಿಸಿದಂತೆ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಕೇಂದ್ರ ಚುನಾವಣಾ ಚುನಾವಣಾ ಆಯೋಗದ ನಿರ್ದೇಶನದನ್ವಯ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಸಂಬಂಧ ಪ್ರತಿ ತಾಲೂಕು ಮಟ್ಟದಲ್ಲಿ ಒಂದು ವಿಶೇಷ ವಿಡಿಯೋ ತಂಡ ರಚಿಸಿ, ರಾಜಕೀಯ ಪಕ್ಷಗಳ ಸಭೆ ಹಾಗೂ ಇತರೆ ಕಾರ್ಯಕ್ರಮ ಚಿತ್ರೀಕರಿಸಿ ಪ್ರತಿನಿತ್ಯ ವರದಿಯನ್ನು ಮೇಲಧಿಕಾರಿಗಳಿಗೆ ಕಳುಹಿಸಬೇಕೆಂದು ಸೂಚಿಸಿದರು.
ಮಾದರಿ ನೀತಿ ಸಂಹಿತೆ ಜಾರಿಗೊಳಿಸಲು ಹಾಗೂ ಯಾವುದೆ ರೀತಿಯ ಚುನಾವಣಾ ಅಪರಾಧಗಳು ನಡೆಯದಂತೆ ಎಲ್ಲ ಅಧಿಕಾರಿಗಳು ಕೆಲಸ ನಿರ್ವಹಿಸಬೇಕು. ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಿರುವ ಸದಸ್ಯರು ಈ ಕ್ಷೇತ್ರದ ಮತದಾರರಾಗಿದ್ದು, ಮತದಾರರ ಪಟ್ಟಿ ಅಂತಿಮಗೊಳಿಸಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗುವುದು. ಚುನಾವಣೆಗೆ ಸಂಬಂಧಿಸಿದಂತೆ ವಾಹನಗಳ ಅವಶ್ಯಕತೆ, ಮತಪೆಟ್ಟಿಗೆ ಸಿದ್ಧಪಡಿಸಿಕೊಳ್ಳುವುದು, ಮತದಾನಾಧಿಕಾರಿಗಳ ತರಬೇತಿ, ಮಸ್ಟರಿಂಗ್ ಹಾಗೂ ಡಿಮಸ್ಟರಿಂಗ್ ಮುಂತಾದ ಎಲ್ಲ ಸಿದ್ಧತೆಗಳನ್ನು ಎರಡೂ ಜಿಲ್ಲೆಗಳ ಸಂಬಂಧಪಟ್ಟ ತಹಸೀಲ್ದಾರರು ಮಾಡಿಕೊಳ್ಳುವ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸೂಕ್ತ ನಿರ್ದೇಶನ ನೀಡಿದರು.
ಈ ಚುನಾವಣೆಗೆ ಮೈಸೂರು ಜಿಲ್ಲಾಧಿಕಾರಿಗಳು ಚುನಾವಣಾಧಿಕಾರಿಯಾಗಿದ್ದು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಹೆಚ್ಚುವರಿ ಜಿಲ್ಲಾಧಿಕಾರಿಗಳು ಸಹಾಯಕ ಚುನಾವಣಾಧಿಕಾರಿಗಳಾಗಿ ಕಾರ್ಯ ನಿರ್ವಹಿಸುವರು. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದ ಕೆ.ಆರ್. ಮಲ್ಲಿಕಾರ್ಜುನಪ್ಪ ಅವರ ರಾಜಿನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸಿರುತ್ತದೆ. ಚುನಾವಣಾ ವೇಳಾಪಟ್ಟಿ ಇಂತಿದೆ.
ಜು. 29 ಅಧಿಸೂಚನೆ ಹೊರಡಿಸುವುದು. ಆ. 5 ನಾಮಪತ್ರ ಸಲ್ಲಿಸಲು ಕೊನೆ ದಿನ, ಆ. 6 ನಾಮಪತ್ರಗಳ ಪರಿಶೀಲಿಸುವುದು, ಆ. 8 ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆ ದಿನ, ಆ. 22ರ ಬೆಳಗ್ಗೆ 8 ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಆ. 26ರ ಬೆಳಗ್ಗೆ 8ಕ್ಕೆ ಮತ ಎಣಿಕೆ ನಡೆಯಲಿದ್ದು, ಆ. 29 ರಂದು ಚುನಾವಣೆ ಮುಕ್ತಾಯವಾಗಲಿದೆ.
ಜಿಪಂ ಸಿಇಒ ಪಿ.ಎ. ಗೋಪಾಲ್, ಉಪ ಕಾರ್ಯದರ್ಶಿ ಪ್ರಕಾಶ್, ಹೆಚ್ಚುವರಿ ಜಿಲ್ಲಾಧಿಕಾರಿ ನಾಗಾನಾಯಕ್, ಡಿ. ಭಾರತಿ, ನಗರಪಾಲಿಕೆ ಆಯುಕ್ತ ಪಿ.ಜಿ. ರಮೇಶ್, ಸಹಾಯಕ ಆಯುಕ್ತರು, ತಹಸೀಲ್ದಾರರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ನಗರಸಭೆ, ಪುರಸಭೆ ಮತ್ತು ಪಪಂಗಳ ಮುಖ್ಯಾಧಿಕಾರಿಗಳು ಇತರ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.