ನಾಳೆ ದಸಂಸದಿಂದ ಧರಣಿ
ಮೈಸೂರು: ಮಕ್ಕಳ ಶಿಕ್ಷಣ ಹಕ್ಕು ಕಾಯ್ದೆಯಡಿ ಪ್ರವೇಶ ನಿರಾಕರಿಸಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಖಂಡಿಸಿ ದಲಿತ ಸಂಘರ್ಷ ಸಮಿತಿಯವರು ಜೂ.4ರ ಬೆಳಗ್ಗೆ 11ಕ್ಕೆ ಡಿಡಿಪಿಐ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಿರುವ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು. ಆಡಳಿತ ಮಂಡಳಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳ ಆಮಿಷಕ್ಕೊಳಗಾಗಿ ಯಾವುದೇ ಕ್ರಮ ಕೈಗೊಳ್ಳದ ಡಿಡಿಪಿಐ ಮತ್ತು ಬಿಇಒ ಅವರನ್ನು ಸೇವೆಯಿಂದ ವಜಾಗೊಳಿಸಬೇಕು.
ಸರ್ಕಾರದ ನಿಯಮ ಗಾಳಿಗೆ ತೂರಿ ಮನಬಂದಂತೆ ಡೊನೇಷನ್ ವಸೂಲಿ ಮಾಡುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ವಂಚಿತರಾಗಿರುವ ಅರ್ಹ ಎಲ್ಲ ಬಡ ಮಕ್ಕಳಿಗೆ ಶಿಕ್ಷಣ ಹಕ್ಕು ಕಾಯ್ದೆಯಡಿಯಲ್ಲಿ ದಾಖಲಿಸಲು ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಶಂಭುಲಿಂಗಸ್ವಾಮಿ ತಿಳಿಸಿದ್ದಾರೆ.