ಎಂಟು ತಿಂಗಳಿಂದ ಶಿಕ್ಷಕರಿಗೆ ಪಗಾರವಿಲ್ಲ!
ವಿಶೇಷ ವರದಿ
ಕ.ಪ್ರ.ವಾರ್ತೆ ಮೈಸೂರು ಜೂ. 3
ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಶಿಕ್ಷಕರಿಗೆ ಸಕಾಲದಲ್ಲಿ ವೇತನ ಪಾವತಿಯಾಗುತ್ತಿಲ್ಲ.
ಅವರೀಗ ಕಳೆದ ಎಂಟು ತಿಂಗಳುಗಳಿಂದ ವೇತನವಿಲ್ಲದೇ ಕುಟುಂಬ ನಿರ್ವಹಣೆಗಾಗಿ ಪರದಾಡುತ್ತಿದ್ದಾರೆ.
ಗ್ರಾಮೀಣ ಪ್ರದೇಶದ ಹಿಂದುಳಿದ, ದಲಿತ, ಅಲ್ಪಸಂಖ್ಯಾತರು ಸೇರಿದಂತೆ ಪ್ರತಿಭಾವಂತ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂಬ ಉದ್ದೇಶದಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ತೆರೆಯಲಾಗಿದೆ. ಈ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಅಧ್ಯಾಪಕರು, ಅಕ್ಟೋಬರ್, ನವೆಂಬರ್, ಡಿಸೆಂಬರ್, ಜನವರಿ, ಫೆಬ್ರವರಿ, ಮಾರ್ಚ್, ಏಪ್ರಿಲ್, ಮೇ ತಿಂಗಳ ವೇತನ ಆಗಿಲ್ಲ.
ಈ ಶಾಲೆಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುತ್ತವೆ.
ಮಾಹಿತಿ ಇಲ್ಲ: ಸಂಬಳವಿಲ್ಲದೇ ತೊಂದರೆಗೀಡಾಗಿರುವ ಶಿಕ್ಷಕರು ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಯನ್ನು ಭೇಟಿ ಮಾಡಿದರೆ, ನಿಮಗೆ ಯಾವ ರೀತಿ ಸಂಬಳ ಮಾಡಬೇಕು ಎಂಬುದು ಗೊತ್ತಾಗುತ್ತಿಲ್ಲ. ನಮಗೆ ಯಾವುದೇ ಮಾಹಿತಿ ಬಂದಿಲ್ಲ ಎಂಬ ಉತ್ತರ ಸಿಗುತ್ತದೆ. ಆಯಾ ವಸತಿ ಶಾಲೆಗಳ ಪ್ರಾಂಶುಪಾಲರೂ ಇದೇ ರೀತಿ ಇಲ್ಲಸಲ್ಲದ ಸಬೂಬು ಹೇಳುತ್ತಿದ್ದಾರೆ.
ಅಳಲು: ನಾವು ಸತತ ಎರಡು- ಮೂರು ತಿಂಗಳಿಂದ ಜಿಲ್ಲಾ ಮಟ್ಟದ ಅಧಿಕಾರಿಯ ಕಚೇರಿಗೆ ಅಲೆಯುತ್ತಿದ್ದೇವೆ. ಕಳೆದ ಎರಡು ತಿಂಗಳಿಂದ ವಿಧಾನಭಾ ಚುನಾವಣೆಯ ನೀತಿ ಸಂಹಿತೆಯ ನೆಪ ಹೇಳಿದರು. ವಿಧಾನಸಭಾ ಚುನಾವಣೆ ಮುಗಿದು, ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದು ಮೂರು ವಾರಗಳಾಗಿವೆ. ಈಗಲೂ ವೇತನ ನೀಡದೇ ಸತಾಯಿಸುತ್ತಿದ್ದಾರೆ ಎಂಬುದು ಅವರ ಅಳಲು.
ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಮೊರಾರ್ಜಿ ವಸತಿ ಶಾಲೆಗಳ ಪ್ರಾಂಶುಪಾಲರ ಬೇಜವಾಬ್ದಾರಿತನವೇ ಇದಕ್ಕೆ ಕಾರಣ. ಶಾಲೆಯ ಪ್ರಾಂಶುಪಾಲರ ವೇತನ ಕಾಲಕಾಲಕ್ಕೆ ಆಗುತ್ತದೆ. ಆದರೆ, ಮಾಸಿಕ 6,480 ಗಳಿಗೆ ದುಡಿಯುತ್ತಿರುವ ಶಿಕ್ಷಕರ ವೇತನ ತಿಂಗಳಾನುಗಟ್ಟಲೇ ಆಗುವುದಿಲ್ಲ ಎಂದರೇ ಏನರ್ಥ ಎಂದು ಪ್ರಶ್ನಿಸುತ್ತಾರೆ.
ಕೆಲಸವನ್ನು ಕಾಯಂ ಮಾಡುತ್ತಿಲ್ಲ. ಬರುವ ಅಲ್ಪವೇತನವನ್ನೂ ನೀಡುತ್ತಿಲ್ಲ. ಇದರಿಂದ ಸಂಸಾರ ನಿರ್ವಹಣೆಗೆ ತೊಂದರೆಯಾಗಿದೆ ಎಂದು ಹೇಳಿದ್ದಾರೆ.
ಜಿಲ್ಲಾಧಿಕಾರಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಕ್ಷಣ ಈ ಬಗ್ಗೆ ಗಮನಹರಿಸಿ, ವೇತನ ಬಿಡುಗಡೆ ಮಾಡದಿದ್ದಲ್ಲಿ ಜಿಲ್ಲೆಯವರೇ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರುವುದಾಗಿ ತಿಳಿಸಿದ್ದಾರೆ.