ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಅದ್ಧೂರಿ ಆಚರಣೆಗೆ ನಿರ್ಧಾರ
ಕ.ಪ್ರ.ವಾರ್ತೆ , ಮೈಸೂರು , ಜೂ. 5
ಮೈಸೂರು ಸಂಸ್ಥಾನ ರಾಜಮನೆತನದ 24ನೇ ಅರಸು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿಯನ್ನು ನಗರದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಹೆಚ್ಚುವರಿ ಜಿಲ್ಲಾಧಿಕಾರಿ ನಾಗನಾಯಕ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಯಿತು.
ಮುಖ್ಯಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರನ್ನು ಆಹ್ವಾನಿಸಲು ಹಾಗೂ ಅವರು ಲಭ್ಯವಾಗುವ ದಿನಾಂಕದಂದು ಜಯಂತಿ ಆಚರಿಸಲು ಸಭೆ ನಿರ್ಣಯ ಕೈಗೊಂಡಿತು.
ಜಯಂತಿ ದಿನದಂದು ಮೈಸೂರು ಅರಮನೆಯ ಕೋಟೆ ಆಂಜನೇಯ ದೇವಸ್ಥಾನದಿಂದ ಕಲಾಮಂದಿರದವರೆಗೆ ಬೃಹತ್ ಮೆರವಣಿಗೆ ಆಯೋಜಿಸಲಾಗುವುದು. ಮೆರವಣಿಗೆಯ ಮಧ್ಯದಲ್ಲಿ ಕೆ.ಆರ್. ವೃತ್ತದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪುತ್ಥಳಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಮಾರ್ಲಾಪಣೆ ಕಾರ್ಯಕ್ರಮ ಜರುಗುವುದು.
ಮೆರವಣಿಗೆಯಲ್ಲಿ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಪೊಲೀಸ್ ವಾದ್ಯವೃಂದ, ಮೌಂಟೆಡ್ ಪೊಲೀಸ್, ವಿವಿಧ ಜಾನಪದ ಕಲಾ ತಂಡಗಳ ಆಕರ್ಷಕ ಪ್ರದರ್ಶನ ಆಯೋಜಿಸಲಾಗುವುದು. ಇದಕ್ಕಾಗಿ ಪ್ರತ್ಯೇಕ ಉಪಸಮಿತ್ನಿ ರಚಿಸಲಾಯಿತು. ಜಯಂತಿ ಕಾರ್ಯಕ್ರಮದಲ್ಲಿ ಶಾಲಾ ಕಾಲೇಜುಗಳ ವಿದ್ಯಾರ್ಥಿ ಸಮುದಾಯ ಹೆಚ್ಚು ಪಾಲ್ಗೊಳ್ಳುವಂತೆ ಶಿಕ್ಷಣ ಇಲಾಖೆಯಿಂದ ಕ್ರಮ ಜರುಗಿಸಲು ತಿಳಿಸಲಾಯಿತು.
ಅಂದು ಕಲಾಮಂದಿರದಲ್ಲಿ ನಡೆಯುವ ಜಯಂತಿ ಕಾರ್ಯಕ್ರಮದ ಅಂಗವಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ವ್ಯಕ್ತಿತ್ವ, ಕಾರ್ಯಸಾಧನೆ ಬಿಂಬಿಸುವ ಛಾಯಾಚಿತ್ರ ಪ್ರದರ್ಶನವನ್ನು ಪ್ರಾಚ್ಯವಸ್ತು ಸಂಗ್ರಹಾಲಯ ಇಲಾಖೆಯಿಂದ ಆಯೋಜಿಸಲಾಗುವುದು. ಇದಲ್ಲದೆ ನಗರದಲ್ಲಿ ಎರಡು ದಿನಗಳ ವಿಚಾರ ಸಂಕಿರಣ ಏರ್ಪಡಿಸಲಿದೆ. ಇದಕ್ಕಾಗಿ ರಾಜ್ಯ ಸರ್ಕಾರ ಒಟ್ಟು ನಾಲ್ಕು ಲಕ್ಷ ರು. ಅನುದಾನ ನೀಡಿದೆ ಎಂದು ಪ್ರಾಚ್ಯವಸ್ತು ಸಂಗ್ರಹಾಲಯ ಇಲಾಖೆಯ ನಿರ್ದೇಶಕ ಡಾ.ಆರ್. ಗೋಪಾಲ್ ತಿಳಿಸಿದರು.
ವೇದಿಕೆ ಕಾರ್ಯಕ್ರಮದ ಮುನ್ನ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜೀವನ ಸಾಧನೆ ಕುರಿತು ಸಾಕ್ಷ್ಯಚಿತ್ರ ಪ್ರದರ್ಶನ ವ್ಯವಸ್ಥೆಯನ್ನು ವಾರ್ತಾ ಇಲಾಖೆಯಿಂದ ಮಾಡಲಾಗುವುದು. ಸಾಂಸ್ಕೃತಿಕ ಉಪಸಮಿತಿಯಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ಸಂಘಟಿಸಲಾಗುವುದು. ಕೃಷ್ಣರಾಜ ಒಡೆಯರ್ ಜೀವನ ವ್ಯಕ್ತಿತ್ವದ ಕುರಿತು ಎರಡು ಸಾವಿರ ಕಿರುಪುಸ್ತಕ ಪ್ರಕಟಿಸಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹಂಚಲು ಸಭೆ ತೀರ್ಮಾನಿಸಿತು.
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಭೆಯಲ್ಲಿ ವ್ಯಕ್ತವಾದ ವಿವಿಧ ಸಲಹೆಗಳನ್ನು ಗಣನೆಗೆ ತೆಗೆದುಕೊಳ್ಳಲಾಗುವುದು. ಇದಲ್ಲದೆ ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರು ಅತ್ಯಂತ ಜವಾಬ್ದಾರಿ ಹಾಗೂ ಜಾಗೃತೆಯಿಂದ ಯಾವುದೆ ಲೋಪದೋಷ ಉಂಟಾಗದಂತೆ ಜಯಂತಿಯ ವೈವಿಧ್ಯಮಯ ಕಾರ್ಯಕ್ರಮ ಸಂಘಟಿಸಬೇಕು. ಇದಕ್ಕಾಗಿ ವಿವಿಧ ಇಲಾಖೆಗಳ ಮುಖ್ಯಸ್ಥರು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕೆಂದು ಹೆಚ್ಚುವರಿ ಜಿಲ್ಲಾಧಿಕಾರಿ ನಾಗಾನಾಯಕ್ ಹೇಳಿದರು.
ಎಂಡಿಎ ಆಯುಕ್ತ ಡಾ.ಸಿ.ಜಿ. ಬೆಟಸೂರ್ ಮಠ್, ಡಿಸಿಪಿ ಕೆ.ಪಿ. ಭೀಮಯ್ಯ, ಹೆಚ್ಚುವರಿ ಎಸ್ಪಿ ಆರ್.ಬಿ. ಮೋಹನ್ರೆಡ್ಡಿ, ವಸ್ತುಪ್ರದರ್ಶನ ಪ್ರಾಧಿಕಾರದ ಕಾರ್ಯದರ್ಶಿ ಚಂದ್ರಶೇಖರ್, ಮಾಜಿ ಮೇಯರ್ ಶ್ರೀಕಂಠಯ್ಯ, ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು, ಪದಾಧಿಕಾರಿಗಳು ಸಭೆಯ ಚರ್ಚೆಯಲ್ಲಿ ಪಾಲ್ಗೊಂಡು ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅರ್ಥಗರ್ಭಿತವಾದ ಅನೇಕ ಸಲಹೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಮಂಜಪ್ಪ ಜಯಂತಿ ಕಾರ್ಯಕ್ರಮದ ರೂಪುರೇಷೆ ವಿವರಿಸಿದರು.