ಎಲ್ಲ ನಗರ ಅಭಿವೃದ್ಧಿಗೆ ಕ್ರಮ: ಸಚಿವ ಸೊರಕೆ
ಕ.ಪ್ರ.ವಾರ್ತೆ ಮೈಸೂರು ಜೂ. 14
ರಾಜ್ಯದ ಎಲ್ಲ ನಗರಗಳ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದು, ಮೊದಲ ಭಾಗವಾಗಿ ಮುಖ್ಯಮಂತ್ರಿಗಳ ಊರಿನಿಂದಲೇ ಅಧಿಕಾರಿಗಳ ಸಭೆ ನಡೆಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತಿದೆ ಎಂದು ನಗರಾಭಿವೃದ್ಧಿ ಸಚಿವ ವಿನಯಕುಮಾರ ಸೊರಕೆ ಹೇಳಿದರು.
ಶುಕ್ರವಾರ ನಗರಪಾಲಿಕೆ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲು ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಐತಿಹಾಸಿಕವಾಗಿ ಪ್ರಸಿದ್ಧಿ ಗಳಿಸಿದ್ದು, ದೇಶ, ವಿದೇಶಗಳಿಂದ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ. ಈ ನಿಟ್ಟಿನಲ್ಲಿ ಮೂಲ ಸೌಕರ್ಯ ಕಲ್ಪಿಸುವುದು ಸರ್ಕಾರದ ಕರ್ತವ್ಯವಾಗಿದೆ. ಮಹಾಯೋಜನೆ ಸಂಬಂಧ ಈಗಾಗಲೇ 1300 ಆಕ್ಷೇಪಣೆಗಳು ಸಲ್ಲಿಕೆಯಾಗಿದ್ದು, ಪರಿಶೀಲನಾ ಹಂತದಲ್ಲಿವೆ ಎಂದರು.
ಜಿಲ್ಲೆಯಲ್ಲಿ ಜನಸಂಖ್ಯೆ ಹೆಚ್ಚಳ ಕಂಡಿದ್ದು, ನಗರ ಮಟ್ಟದಲ್ಲಿ 2001 ಹಾಗೂ 2011ರ ಜನಗಣತಿಯನ್ನು ಗಮನಿಸಿದಾಗ ಶೇ. 3 ರಷ್ಟು ಜನಸಂಖ್ಯೆ ಹೆಚ್ಚಾಗಿದೆ. ಗ್ರಾಮಾಂತರ ಪ್ರದೇಶದಲ್ಲಿ ಶೇ. 7 ರಷ್ಟು ಇಳಿಕೆಯಾಗಿದೆ. ಆದ್ದರಿಂದ ಬೆಂಗಳೂರನ್ನು ಹೊರತುಪಡಿಸಿ ಉಳಿದ ನಗರಗಳ ಅಭಿವೃದ್ಧಿಯ ಹೊಣೆ ನನ್ನ ಮೇಲಿದೆ. ನಗರ ವ್ಯಾಪ್ತಿಯಲ್ಲಿ ಬರುವ ಕೆರೆ, ಕೊಳವೆ ಬಾವಿ ಶುದ್ಧೀಕರಿಸಿ ಪರಿಶುದ್ಧ ನೀರು ಒದಗಿಸಲು ನಿರ್ಧರಿಸಲಾಗಿದೆ. ನಗರಾಭಿವೃದ್ಧಿಗೆ ಮುಖ್ಯಮಂತ್ರಿಗಳ ನಿಧಿಯಿಂದ ಸಾಕಷ್ಟು ಹಣ ಬಿಡುಗಡೆ ಮಾಡಲಾಗಿದೆ. ಕಳೆದ ಎರಡು ವರ್ಷದಲ್ಲಿ ಬಿಡುಗಡೆಯಾದ ಅನುದಾನದಲ್ಲಿ ಶೇ. 50 ರಷ್ಟನ್ನು ವಿನಿಯೋಗಿಸಲಾಗಿದೆ ಎಂದರು.