ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಅಧಿಕಾರಿಗಳಿಗೆ ಲೋಕಾಯುಕ್ತ ಡಿವೈಎಸ್ಪಿ ರಶ್ಮಿ ತರಾಟೆ

Mainashree
Updated On : 21 Jun 2013, 11:21 am

ಕ.ಪ್ರ.ವಾರ್ತೆ  ಕೆ.ಆರ್. ನಗರ  ಜೂ. 21
ತಾಲೂಕಿನ ಗೌಡೇನಹಳ್ಳಿ, ಬೀರನಹಳ್ಳಿ, ತಂದ್ರೆ ಮತ್ತು ಸಣ್ಣೇಗೌಡನಕೊಪ್ಪಲು ಗ್ರಾಮಗಳ ಸಂಪರ್ಕ ರಸ್ತೆಗಳ ಕಾಮಗಾರಿಗಳನ್ನು ನಮ್ಮ ಗ್ರಾಮ, ನಮ್ಮ ರಸ್ತೆ ಯೋಜನೆಯಡಿ ಕೈಗೊಂಡು ವರ್ಷಗಳಾದರೂ ಈವರೆಗೂ ಪೂರ್ಣಗೊಳಿಸದೆ ಕಳಪೆ ಗುಣಮಟ್ಟದಿಂದ ನಿರ್ವಹಣೆ ಮಾಡಿರುವ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಇಲಾಖೆಯ ಅಧಿಕಾರಿಗಳನ್ನು ಲೋಕಾಯುಕ್ತ ಡಿವೈಎಸ್ಪಿ ರಶ್ಮಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಆಲಿಸಿ, ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದಾಗ ಮಾವತ್ತೂರು ಗ್ರಾಪಂ ಮಾಜಿ ಅಧ್ಯಕ್ಷ ಹರಿಚಿದಂಬರ ದೂರು ನೀಡಿ, ರಸ್ತೆ ಕಾಮಗಾರಿಯ ಬಗ್ಗೆ ಅಸಡ್ಡೆ ತೋರುತ್ತಿರುವ ಬಗ್ಗೆ ತಿಳಿಸಿದರು. ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪೂರ್ಣಚಂದ್ರ ಅವರನ್ನು ಈ ಕುರಿತು ಪ್ರಶ್ನಿಸಿದಾಗ, ಈ ಬಗ್ಗೆ ತಪ್ಪು ಮಾಹಿತಿ ನೀಡಿದ ಅವರಿಗೆ ಎಚ್ಚರಿಕೆ ನೀಡಿದರು. ಅಲ್ಲದೆ, ನಿಮ್ಮ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕಾನೂನುಬಾಹಿರ ಖಾತೆ: ಪುರಸಭೆಯಲ್ಲಿ ನಿಯಮಬಾಹಿರವಾಗಿ ಖಾತೆ ಮಾಡಲಾಗುತ್ತದೆ. ಸಮಪರ್ಕವಾಗಿ ದಾಖಲಾತಿಗಳನ್ನು ಪರಿಶೀಲಿಸದೆ ಅಕ್ರಮ ಮಾಡಲಾಗುತ್ತಿದೆ ಎಂದು ಮುಖ್ಯಾಧಿಕಾರಿ ನಾಗಶೆಟ್ಟಿ ವಿರುದ್ಧ ಹರಿಹಾಯ್ದರು. ಕೂಡಲೇ ಅಕ್ರಮ ಖಾತೆಗಳನ್ನು ರದ್ದುಪಡಿಸಿ, ಸಮರ್ಪಕವಾಗಿ ಕಾರ್ಯನಿರ್ವಹಿಸುವುದರ ಜತೆಗೆ, ಸಾರ್ವಜನಿಕರು ಕಚೇರಿಗೆ ಬಂದಾಗ ಅನಗತ್ಯವಾಗಿ ಅಲೆಸದೆ ಸಕಾಲದಲ್ಲಿ ಕೆಲಸ ಮಾಡಿಕೊಡಬೇಕು ಎಂದು ಹೇಳಿದರು.
ಲಾಳಂದೇವನಹಳ್ಳಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ನಿವೇಶನದ ಖಾತೆ ಮಾಡಿಕೊಡದೆ ಸತಾಯಿಸುತ್ತಿರುವ ಬಗ್ಗೆ ದೂರು ಬಂದಿದ್ದು, ಇದರಿಂದ ಆಕ್ರೋಶಗೊಂಡ ಅವರು, ಲಂಚ ಪಡೆದು ಏನೆಲ್ಲ ಕೆಲಸ ಮಾಡುವ ನೀವು, ಬಡವರು ಕಚೇರಿಗೆ ಬಂದು ಅರ್ಜಿ ಸಲ್ಲಿಸಿ ಖಾತೆ ಮಾಡಿಕೊಡುವಂತೆ ಮನವಿ ಸಲ್ಲಿಸಿದರೂ ಗಮನ ಹರಿಸಿಲ್ಲ. ಕೂಡಲೇ ಖಾತೆ ಮಾಡಿ ನನಗೆ ವರದಿ ನೀಡಬೇಕು ಎಂದು ಸೂಚಿಸಿದರು. ಇಲ್ಲಿನ ಅಂಬೇಡ್ಕರ್ ವಿದ್ಯಾರ್ಥಿನಿಲಯದಲ್ಲಿ ವಿದ್ಯಾರ್ಥಿಗಳಿಗೆ ಸರಿಯಾದ ಮೂಲ ಸೌಕರ್ಯವಿಲ್ಲದೆ ತೊಂದರೆಯಾಗಿದ್ದು, ಊಟ ಮತ್ತು ಕುಡಿಯುವ ನೀರಿನಲ್ಲಿ ಸ್ವಚ್ಛತೆ ಇಲ್ಲದಿರುವುದರಿಂದ ಸಾಂಕ್ರಾಮಿಕ ರೋಗದ ಭೀತಿ ಕಾಡುತ್ತಿದೆ. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿ ನಮೂದಿಸಿ ಹಣ ಲಪಟಾಯಿಸಲಾಗುತ್ತಿದೆ ಎಂದು ದಲಿತ ಮುಖಂಡ ಯೋಗೇಶ್ ದೂರು ನೀಡಿದರು.
ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಸಮಾಜ ಕಲ್ಯಾಣಾಧಿಕಾರಿ ಭಾರತಿ ಅವರಿಗೆ ಸಮಸ್ಯೆಯ ಬಗ್ಗೆ ಗಮನ ಹರಿಸುವಂತೆ ತಿಳಿಸಿದರು.
ತಾಲೂಕಿನ ವಿವಿಧ ಗ್ರಾಮಗಳಿಂದ ಬಂದಿದ್ದ ಸಾರ್ವಜನಿಕರ ದೂರು ಆಲಿಸಿದ ಲೋಕಾಯುಕ್ತರು, ಈ ಬಗ್ಗೆ ಶೀಘ್ರ ಕ್ರಮ ಕೈಗೊಂಡು ಸಮಸ್ಯೆ ಪರಿಹರಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ತಾಪಂ ಕಾರ್ಯ ನಿರ್ವಹಣಾಧಿಕಾರಿ ಕೆ.ಬಸವರಾಜು, ತಾಲೂಕು ಆರೋಗ್ಯಾಧಿಕಾರಿ ಶಿವಪ್ರಸಾದ್, ಕ್ಷೇತ್ರ ಶಿಕ್ಷಣಾಧಿಕಾರಿ ಜವರೇಗೌಡ, ಬಿಸಿಎಂ ಅಧಿಕಾರಿ ಭಾಗ್ಯ, ಡಾ.ರಾಮಚಂದ್ರ, ಅಬಕಾರಿ ಇನ್‌ಸ್ಪೆಕ್ಟರ್ ಮೋಹನ್ ಮತ್ತು ಇತರ ಅಧಿಕಾರಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement