ಕ್ರೀಡಾಂಗಣ ಕಾಮಗಾರಿ ಪರಿಶೀಲನೆ
ಚಾಮರಾಜನಗರ: ಜಿಲ್ಲಾ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ಶುಕ್ರವಾರ ಅಧಿಕಾರಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.
ಬಳಿಕ ಮಾತನಾಡಿ, ಕ್ರೀಡಾಪಟುಗಳಿಗಾಗಿ ನಿರ್ಮಿಸಲಾಗುತ್ತಿರುವ ಹಾಸ್ಟೆಲ್ ಹಾಗೂ ಗ್ಯಾಲರಿ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ. ಇನ್ನು 8 ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ತಿಳಿಸಿದರು.
32 ಎಕರೆ ವಿಶಾಲ ಕ್ರೀಡಾಂಗಣವನ್ನು ಸುಸಜ್ಜಿತವಾಗಿ ನಿರ್ಮಾಣ ಮಾಡಲು ಸರ್ಕಾರದ ವತಿಯಿಂದ ಇನ್ನೂ ಹೆಚ್ಚಿನ ಅನುದಾನ ಕೊಡಿಸುವುದಾಗಿ ಭರವಸೆ ನೀಡಿದರು.
ಎಸ್ಆರ್ ದರ ಅನುಮೋದನೆ ಇಲ್ಲದ ಕಾರಣ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ. ಅನುಮೋದನೆ ದೊರೆತ ನಂತರ ಶೀಘ್ರಗತಿಯಲ್ಲಿ ನಡೆಸಲಾಗುವುದು ಎಂದು ಗುತ್ತಿಗೆದಾರರು ತಿಳಿಸಿದರು. ನಿರ್ಮಿತಿ ಕೇಂದ್ರದ ರಾಜಪ್ಪ, ವೃಷಭೇಂದ್ರಪ್ಪ, ಯುವಜನ ಸೇವಾ ಕ್ರೀಡಾ ಇಲಾಖೆಯ ಚೆಲುವಯ್ಯ, ಮಹದೇವು, ರಂಗಸ್ವಾಮಿ ಇದ್ದರು.