ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಿ
ಮೈಸೂರು: ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಇದರಲ್ಲಿ ಯಾವುದೇ ರೀತಿಯ ಲೋಪದೋಷವಾಗದಂತೆ ಅತ್ಯಂತ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ. ರಾಮೇಗೌಡ ಸೂಚಿಸಿದರು.
ನಗರದಲ್ಲಿ ಶುಕ್ರವಾರ ಮಾದರಿ ನೀತಿ ಸಂಹಿತೆ ಕಾರ್ಯಪಡೆ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಯಾ ವಾರ್ಡುಗಳ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಕಾರ್ಯಾಚರಣೆಯ ವಾಸ್ತವಿಕ ವರದಿಯನ್ನು ನಿಗದಿತ ಅವಧಿಯಲ್ಲಿ ಸಲ್ಲಿಸಬೇಕು. ವಿಳಂಬ ನೀತಿ ಸಹಿಸಲಾಗದು ಎಂದು ಎಚ್ಚರಿಸಿದರು.
ಈ ಚುನಾವಣೆಯ ಅವಧಿಯಲ್ಲಿ ನೀತಿ ಸಂಹಿತೆ ಉಲ್ಲಂಘನೆಯ ದೂರುಗಳೇನಾದರೂ ಬಂದರೆ ಆಯಾ ಅಧಿಕಾರಿಗಳೇ ಹೊಣೆಗಾರರು. ಯಾವುದೇ ರೀತಿಯ ದೂರು ಬಾರದಂತೆ ಕಟ್ಟೆಚ್ಚರ ವಹಿಸಿ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ಈಗ ಚುನಾವಣಾ ಪ್ರಚಾರದ ಕಾವು ಏರ ತೊಡಗಿದ್ದು, ಎಲ್ಲ ಅಧಿಕಾರಿಗಳು 24 ಗಂಟೆಗಳ ಕಾಲ ಜಾಗೃತರಾಗಿರಬೇಕು ಹಾಗೂ ಯಾವುದೇ ಅಧಿಕಾರಿ ಸರಿಯಾಗಿ ಕೆಲಸ ಮಾಡದಿದ್ದರೆ, ನಿರ್ಲಕ್ಷ್ಯ ವಹಿಸಿದರೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.
ಚುನಾವಣೆಯ ಪ್ರಚಾರ, ಮತದಾನ ಹಾಗೂ ಮತ ಎಣಿಕೆ ಸಂದರ್ಭಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಬಗ್ಗೆ ಹಾಗೂ ಚುನಾವಣಾ ಪ್ರಚಾರದಲ್ಲಿ ವಿವಿಧ ಪಕ್ಷಗಳು, ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ನಡೆಸುವ ವಾಹನಗಳ ರ್ಯಾಲಿ, ಸಭೆ ಸಮಾರಂಭ, ಜಾಹೀರಾತು, ಬ್ಯಾನರ್, ಪೋಸ್ಟರ್, ಎಸ್ಎಂಎಸ್ ರವಾನೆ, ಟಿವಿ ಚಾನೆಲ್ಗಳಲ್ಲಿ ಜಾಹೀರಾತು ಮುಂತಾದವುಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಧ್ವನಿವರ್ಧಕಗಳನ್ನು ಬೆಳಗಿನ 7 ರಿಂದ ರಾತ್ರಿ 10 ಗಂಟೆಯವರೆಗೆ ಬಳಸುವಂತೆ ಎಲ್ಲ ಪಕ್ಷದವರಿಗೆ ಕಟ್ಟುನಿಟ್ಟಿನ ಆದೇಶ ನೀಡಬೇಕು ಎಂದು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ನಾಗಾನಾಯಕ್, ಡಿಸಿಪಿ ಬಸವರಾಜ್ ವೈ. ಮಾಲಗತ್ತಿ ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.