ಮಾರ್ಕಂಡೇಯ ಕಾಟ್ಜೂ ನಿರ್ಧಾರದಿಂದ ಆತಂಕ: ಪೊನ್ನಪ್ಪ
ಕ.ಪ್ರ.ವಾರ್ತೆ ಮೈಸೂರು ಮಾ.26
ಭಾರತೀಯ ಪತ್ರಿಕಾ ಮಂಡಳಿಯು ಪತ್ರಕರ್ತರಿಗೆ ಅರ್ಹತೆ ವಿಧಿಸುವ ಮಾನದಂಡಕ್ಕೆ ಮುಂದಾಗಿರುವುದು ಹೊಸ ಸಂಪ್ರದಾಯ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಎಂ. ಎ. ಪೊನ್ನಪ್ಪ ಆಕ್ಷೇಪಿಸಿದರು.
ಜೆಎಸ್ಎಸ್ ಮಹಾವಿದ್ಯಾಪೀಠವು ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಚಾಮರಾಜನಗರ ಜಿಲ್ಲಾ ಪತ್ರಕರ್ತರ ಸಂಘ ಆಶ್ರಯದಲ್ಲಿ ಮಂಗಳವಾರ ಜೆಎಸ್ಎಸ್ ಕಾನೂನು ಕಾಲೇಜಿನಲ್ಲಿ ಏರ್ಪಡಿಸಿದ್ದ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.
ಪತ್ರಕರ್ತರಾಗಲು ಮಾನದಂಡ ವಿಧಿಸುವ ಸಲುವಾಗಿ ಮೂವರು ಸದಸ್ಯರ ಸಮಿತಿ ರಚಿಸಿರುವ ಭಾರತೀಯ ಪತ್ರಿಕಾ ಮಂಡಳಿಯ ಅಧ್ಯಕ್ಷ ಮಾರ್ಕಂಡೇಯ ಕಾಟ್ಜೂ ಅವರ ನಿರ್ಧಾರ ಆತಂಕ ತರಿಸಿದೆ. ಯಾವ ದೇಶದಲ್ಲಿಯೂ ಇಲ್ಲದ ಇಂತಹ ಮಾನದಂಡ ವಿಧಿಸುವ ಹೊಸ ಸಂಪ್ರದಾಯಕ್ಕೆ ಮುಂದಾಗಿದ್ದಾರೆ ಎಂದರು. ಶೈಕ್ಷಣಿಕ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿರುವ ಜೆಎಸ್ಎಸ್ ಸಂಸ್ಥೆಯು ಸಾಧಕ ಪತ್ರಕರ್ತರನ್ನು ಗುರುತಿಸಿ ಈ ಪ್ರಶಸ್ತಿ ನೀಡುತ್ತಿರುವುದು ಅಭಿನಂದನೀಯ ಎಂದರು.
ಅಧ್ಯಕ್ಷತೆ ವಹಿಸಿ ಉಪಲೋಕಾಯುಕ್ತ ನ್ಯಾಯಮೂರ್ತಿ ಸುಭಾಷ್ ಬಿ. ಅಡಿ ಮಾತನಾಡಿದರು. ಮೈಸೂರಿನ ಹಿರಿಯ ಪತ್ರಕರ್ತ ಈಚನೂರು ಕುಮಾರ್ ಹಾಗೂ ಚಾಮರಾಜನಗರದ ಹಿರಿಯ ಪತ್ರಕರ್ತ ಎಚ್. ವಿ. ಸತ್ಯನಾರಾಯಣ ಅವರಿಗೆ ಕ್ರಮವಾಗಿ 2011 ಮತ್ತು 2012 ನೇ ಸಾಲಿನ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿ, 10 ಸಾವಿರ ಹಾಗೂ ಪ್ರಶಸ್ತಿ ಫಲಕ ನೀಡಿ ಪುರಸ್ಕರಿಸಲಾಯಿತು. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ. ಮಹೇಂದ್ರ ಸ್ವಾಗತಿಸಿದರು. ಚಾಮರಾಜನಗರ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಅಬ್ರಹಾಂ ಡಿಸಿಲ್ವ, ಪತ್ರಕರ್ತ ಮಾ. ವೆಂಕಟೇಶ್ ಪ್ರಶಸ್ತಿ ಫಲಕ ವಾಚಿಸಿದರು. ಸಂಘದ ಕಾರ್ಯದರ್ಶಿ ಸುಬ್ರಮಣ್ಯ ನಿರೂಪಿಸಿದರು. ಆನಂದ್ ವಂದಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.