ಅಭಿವೃದ್ಧಿಗೆ ಹೆಚ್ಚಿನ ಅನುದಾನ: ಡಾ. ಎಚ್‌ಸಿಎಂ
ಟಿ. ನರಸೀಪುರ: ಹೆಚ್ಚಿನ ಅನುದಾನ ಬಳಸಿಕೊಂಡು ಟಿ. ನರಸೀಪುರ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವುದಾಗಿ ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು.
ತಾಲೂಕಿನ ಉಕ್ಕಲಗೆರೆ ಗ್ರಾಮದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಂದ ಜಿಲ್ಲಾ ಕೇಂದ್ರದ ಸರ್ಕಾರಿ ಭವನದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, 5ನೇ ಬಾರಿಗೆ ಶಾಸಕನಾಗಿ ಆಯ್ಕೆ ಮಾಡಿ, ಕಾಂಗ್ರೆಸ್ ಪಕ್ಷ ಬೆಂಬಲಿಸಿರುವುದರಿಂದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿ ತಿಳಿಸಿದರು.
5 ವರ್ಷಗಳ ಕಾಲ ಶಾಸಕರಾಗಿ ಬನ್ನೂರು ಹೋಬಳಿ ಸೇರಿದಂತೆ ತಲಕಾಡು ಹಾಗೂ ಸೋಸಲೆ ಹೋಬಳಿಗಳ ಸಮಸ್ಯೆ ಅರಿತಿದ್ದೇನೆ. ವಿರೋಧ ಪಕ್ಷದಲ್ಲಿದ್ದುಕೊಂಡು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಆದಷ್ಟು ಅನುದಾನ ತರುವ ಪ್ರಯತ್ನ ಮಾಡಿದ್ದೇನೆ. ಈಗ ನಮ್ಮ ಸರ್ಕಾರ ಅಧಿಕಾರದಲ್ಲಿ ಇರುವುದರಿಂದ ಅಭಿವೃದ್ಧಿಗೆ ಅಗತ್ಯವಿರುವ ಅನುದಾನ ನೀಡಲಾಗುವುದು. ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಮತ್ತು ಸಾರ್ವಜನಿಕ ಅಭಿಪ್ರಾಯದಂತೆ ಅಭಿವೃದ್ಧಿ ಕಾರ್ಯಕ್ರಮಕ್ಕೆ ಅನುದಾನ ಮಂಜೂರು ಮಾಡುವುದಾಗಿ ತಿಳಿಸಿದರು.
ಕ್ಷೇತ್ರ ಪ್ರವಾಸ: ವಿಧಾನಸಭೆ ಅಧಿವೇಶನ ಮುಗಿದ ಬಳಿಕ ಜೂ. 7ರ ನಂತರ ನರಸೀಪುರ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡು ಮತದಾರರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಸಚಿವ ಮಹದೇವಪ್ಪ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಅಧಿವೇಶನಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇನೆ. ಅವರೊಂದಿಗೆ ನರಸೀಪುರ ಕ್ಷೇತ್ರವನ್ನು ಮಾದರಿ ತಾಲೂಕನ್ನಾಗಿ ಮಾಡುವ ವಿಶ್ವಾಸ ವ್ಯಕ್ತಪಡಿಸಿದರು. ಇದೇ ವೇಳೆ ಉಕ್ಕಲಗೆರೆಯ ಎಂಕೆ ಅಡಿಗೆ ಗ್ರೂಪ್ಸ್‌ನ ಎಂ. ಕುಮಾರ್, ಎಪಿಎಂಸಿ ಮಾಜಿ ಸದಸ್ಯ ಬಸವಣ್ಣ, ಮುಖಂಡ ಕಾವೇರಿಪುರ ಮಹದೇವಶೆಟ್ಟಿ, ವಾಟಾಳು ಗ್ರಾಪಂ ಮಾಜಿ ಅಧ್ಯಕ್ಷ ನಾಗೇಶ್ ಅವರು ತಮ್ಮ ಬೆಂಬಲಿಗರು ಎಚ್.ಸಿ. ಮಹದೇವಪ್ಪ ಅವರನ್ನು ಅಭಿನಂದಿಸಿದರು.
ಮಾಜಿ ಶಾಸಕ ಎಸ್. ಕೃಷ್ಣಪ್ಪ, ಜಿಪಂ ಮಾಜಿ ಸದಸ್ಯ ಎಂ.ಕೆ. ಕೆಂಪಣ್ಣ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಕೆ. ವಜ್ರೇಗೌಡ, ಎಪಿಎಂಸಿ ಅಧ್ಯಕ್ಷ ಎಂ. ರಾಜಣ್ಣ, ಗ್ರಾಮಾಂತರ ಲಾರಿ ಮಾಲೀಕರ ಸಂಘದ ಜಿಲ್ಲಾಧ್ಯಕ್ಷ ಎನ್. ಲಿಂಗರಾಜು, ಮೈಮುಲ್ ಮಾಜಿ ನಿರ್ದೇಶಕ ಪ್ರಭಾಕರ, ಉಕ್ಕಲಗೆರೆ ಗ್ರಾಪಂ ಉಪಾಧ್ಯಕ್ಷ ಸಿ. ನಂಜುಂಡಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ಎಚ್. ಮಂಜುನಾಥ್, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎ.ಎನ್. ಸ್ವಾಮಿ, ಸಿದ್ದಶೆಟ್ಟಿ, ಎಸ್ಸಿ ಘಟಕದ ಅಧ್ಯಕ್ಷ ಎ. ಶಿವಕುಮಾರ್, ವಾಟಾಳು ಗ್ರಾಪಂ ಉಪಾಧ್ಯಕ್ಷ ಎಚ್.ಎನ್. ಉಮೇಶ್, ಪ.ಪಂ ಸದಸ್ಯ ಸಿ. ಉಮೇಶ ಇತರರು ಇದ್ದರು.