ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಬಿಜೆಪಿ ಸೋಲಿಗೆ ಮತ ವಿಭಜನೆ ಕಾರಣ: ಜಗದೀಶ ಶೆಟ್ಟರ್

Vishwanath S
Updated On : 24 May 2013, 12:31 pm

ಕ.ಪ್ರ.ವಾರ್ತೆ ,   ಪಿರಿಯಾಪಟ್ಟಣ ,   ಮೇ 23
ಮತ ವಿಭಜನೆಯಿಂದಾಗಿ ಬಿಜೆಪಿ ರಾಜ್ಯದಲ್ಲಿ ಸೋಲಲು ಕಾರಣವಾಯಿತು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.
ತಾಲೂಕಿನ ಬೆಟ್ಟದಪುರದಲ್ಲಿ ಗುರುವಾರ ಬಿಜೆಪಿ ಅಭ್ಯರ್ಥಿ ಆರ್.ಟಿ. ಸತೀಶ್ ಪರವಾಗಿ ಮತಯಾಚಿಸಿ ಮಾತನಾಡಿ, ಬಿಜೆಪಿ ನೇತೃತ್ವದ ಸರ್ಕಾರದ ಮೊದಲ ಅವಧಿಯಲ್ಲಾದ ಭ್ರಷ್ಟಾಚಾರದ ಕಾರಣದಿಂದಾಗಿ ಪಕ್ಷಕ್ಕೆ ಹಿನ್ನಡೆಯಾಯಿತು. ತಾವು ಹಾಗೂ ಸದಾನಂದಗೌಡರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಭ್ರಷ್ಟಾಚಾರಕ್ಕೆ ಅವಕಾಶ ನೀಡದೆ, ರಾಜ್ಯದ ಅಭಿವೃದ್ಧಿಗೆ ಆದ್ಯತೆ ನೀಡಿ ಅಧಿಕಾರ ನಡೆಸಲಾಯಿತು. ಅದಾಗ್ಯೂ ಪಕ್ಷ ಸೋಲನುಭವಿಸಿದೆ ಎಂದು ತಿಳಿಸಿದರು.
ತಮ್ಮ ಅವಧಿಯ ಅಂತ್ಯದಲ್ಲಿ ರಾಜ್ಯದ ಬೊಕ್ಕಸದಲ್ಲಿ ಸಾಕಷ್ಟು ಹಣವಿಲ್ಲದಿದ್ದರೆ ಮುಖ್ಯಮಂತ್ರಿ ಹೇಗೆ ತಾನೇ ಸಾಲ ಮನ್ನಾ ಬಗ್ಗೆ ಮಾತನಾಡಲು ಸಾಧ್ಯವಾಗುತ್ತಿತ್ತು ಎಂದು ಪ್ರಶ್ನಿಸಿದರಲ್ಲದೆ, ಸಿದ್ದರಾಮಯ್ಯ ಅವರು ಮತ್ತೊಮ್ಮೆ ಬಜೆಟ್ ಮಂಡಿಸುವ ಬಗ್ಗೆ ಮಾತನಾಡುತ್ತಿದ್ದಾರೆ ಏಕೆ ಎಂದು ತಿಳಿಯುತ್ತಿಲ್ಲ ಎಂದು ಹೇಳಿದರು.
ವಿಧಾನಸೌಧದಲ್ಲಿ ಅಧಿಕೃತ ಪ್ರತಿಪಕ್ಷವಾಗಿ ಕಾರ್ಯ ನಿರ್ವಹಿಸಲು ಪಿರಿಯಾಪಟ್ಟಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಮತದಾರರು ಗೆಲ್ಲಿಸಿಕೊಡುವಂತೆ ಮನವಿ ಮಾಡಿದರು.
ವಿಧಾನಪರಿಷತ್ ಸದಸ್ಯರಾದ ಡಿ.ಎಸ್. ವೀರಯ್ಯ, ಸಿ.ಎಚ್. ವಿಜಯಶಂಕರ್, ಅಭ್ಯರ್ಥಿ ಆರ್.ಟಿ. ಸತೀಶ್ ಮಾತನಾಡಿ, ಮತಯಾಚಿಸಿದರು. ಇದೇ ವೇಳೆ ವಿವಿಧ ಪಕ್ಷಗಳ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾದರು.
ಪಕ್ಷದ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ರೀನಾಪ್ರಕಾಶ್, ಜಿಪಂ ಸದಸ್ಯ ಡಾ. ಶಿವರಾಂ, ವಸ್ತು ಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಡಿ. ಮಹೇಂದ್ರ, ಪದಾಧಿಕಾರಿಗಳಾದ ಪುಟ್ಟಸ್ವಾಮಿ, ಎಂ.ಎಂ. ರಾಜೇಗೌಡ, ವಿಕ್ರಂರಾಜ್, ನಿಜಾಮುದ್ದೀನ್, ಶಿವಕುಮಾರ್, ಯೋಗೇಶ್, ಕುಮಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement