ಪ್ರತಿಭಾವಂತ ವಿದ್ಯಾರ್ಥಿಗಳ ಜತೆ ಸಂವಾದ
ಕ.ಪ್ರ.ವಾರ್ತೆ ಮೈಸೂರು ಮೇ 31
ವಿಜಯ ವಿಠ್ಠಲ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಹಾಗೂ ಸಿಇಟಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಎಚ್. ಸತ್ಯಪ್ರಸಾದ್ ಮಾತನಾಡಿ, ಈ ರೀತಿಯ ಸಂವಾದವು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಒಂದು ಪ್ರೇರಣೆ ಮತ್ತು ವಿದ್ಯಾರ್ಥಿಗಳಿಗೆ ನೀಟ್, ಐಸೆಟ್ ಮೊದಲಾದ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕ ಗಳಿಸಲು ಮಾರ್ಗದರ್ಶನವಾಗಿರುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.ಸಿಇಟಿಯಲ್ಲಿ 10ನೇ ರ್ಯಾಂಕ್ ಗಳಿಸಿದ ನೀರಜ್ ರವೀಂದ್ರ ಮಾತನಾಡಿ, ಪರೀಕ್ಷೆಯಲ್ಲಿ ರ್ಯಾಂಕ್ ಪಡೆಯಲು ಕಠಿಣ ಪರಿಶ್ರಮ ಅಗತ್ಯ. ನಿರ್ದಿಷ್ಟವಾದ ಗುರಿಯಿದ್ದರೆ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ. ನಮ್ಮಲ್ಲಿ ನಿರ್ದಿಷ್ಟ ಗುರಿ ತಲುಪುವ ಪ್ರಯತ್ನವಿರಬೇಕು. ಅಂದಿನ ಪಾಠ ಅಂದೇ ಓದಬೇಕು. ವಾರ್ಷಿಕ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಜತೆಜತೆಯಲ್ಲಿಯೇ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿದ ಅಂಕಿತಾ ಅನಿಲ್ಕುಮಾರ್ ರಾಯ್ಕರ್, ನಿಶ್ಚಲ್, ನಿರೂಪ್ ಆರಾಧ್ಯ, ಮದನ್ ಮಾತನಾಡಿದರು.