'ಶಾದಿಭಾಗ್ಯ ಮಲತಾಯಿ ಧೋರಣೆ'
ಮೈಸೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಶಾದಿಭಾಗ್ಯ ಯೋಜನೆಯು ಮಲತಾಯಿ ಧೋರಣೆಯಿಂದ ಕೂಡಿದೆ ಎಂದು ಬಿಜೆಪಿ ಚಾಮುಂಡೇಶ್ವರಿ ಕ್ಷೇತ್ರದ ಹಿಂದುಳಿದ ವರ್ಗ ಮೋರ್ಚಾದ ಅಧ್ಯಕ್ಷ ಹಿನಕಲ್ ಗಣೇಶ್ ಟೀಕಿಸಿದ್ದಾರೆ.
ರಾಜ್ಯದಲ್ಲಿ ಎಲ್ಲಾ ಜನಸಾಮಾನ್ಯರನ್ನು ಒಂದೇ ರೀತಿಯಲ್ಲಿ ನೋಡುವುದು ರಾಜನ ಕರ್ತವ್ಯವಾಗಿದೆ. ಅದೇ ರೀತಿ ರಾಜ್ಯದ ದೊರೆ ಎನ್ನಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ವರ್ಗದ ಜನರನ್ನು ಒಂದೇ ರೀತಿಯಲ್ಲಿ ಕಾಣದಿರುವುದು ನೋವಿನ ಸಂಗತಿ ಎಂದಿದ್ದಾರೆ. ಬಿಜೆಪಿ ಸರ್ಕಾರ ಎಲ್ಲಾ ವರ್ಗದ ಜನರಿಗೆ ಭಾಗ್ಯಲಕ್ಷ್ಮೀ ಯೋಜನೆ ಜಾರಿಗೊಳಿಸಿ ಯಶಸ್ವಿಯಾಗಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಆ ರೀತಿ ಮಾಡದೆ, ಒಂದು ಸಮುದಾಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಶಾದಿಭಾಗ್ಯ ಯೋಜನೆ ಜಾರಿಗೆ ತಂದಿರುವುದು ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಹಚ್ಚಿದಂತೆ ಎಂದು ಅವರು ದೂಷಿಸಿದ್ದಾರೆ. ಎಲ್ಲಾ ವರ್ಗದ ಹೆಣ್ಣು ಮಕ್ಕಳ ಕಲ್ಯಾಣಕ್ಕಾಗಿ ಕಂಕಣ ಭಾಗ್ಯ ಎಂಬುವ ಯೋಜನೆ ಜಾರಿಗೆ ತರಬೇಕು ಎಂದು ಆಗ್ರಹಿಸಿದ್ದಾರೆ.