ಸಿಎಂ ವಿರುದ್ಧ ಶಾಸಕರ ಅಸಮಾಧಾನ ಸುಳ್ಳು: ಶ್ರೀನಿವಾಸಪ್ರಸಾದ್
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ 20 ಶಾಸಕರು ಅಸಮಾಧಾನಗೊಂಡಿದ್ದಾರೆ ಎಂಬ ಆರೋಪ ಸುಳ್ಳು. ಈ ಬಗ್ಗೆ ವರಿಷ್ಠ ಮಂಡಳಿಗೆ ಯಾವುದೇ ದೂರು ಹೋಗಿಲ್ಲ ಎಂದು ಕಂದಾಯ ಸಚಿವ ವಿ. ಶ್ರೀನಿವಾಸಪ್ರಸಾದ್ ಹೇಳಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮ ಆಡಳಿತ ನೀಡುತ್ತಿದ್ದಾರೆ ಎಂದರು. ಸಿದ್ದರಾಮಯ್ಯ ಎಲ್ಲ ಜನಾಂಗಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿದ್ದಾರೆ. ಪ್ರಣಾಳಿಕೆಯಲ್ಲಿನ ಬಹುಪಾಲು ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಉಪ ಚುನಾವಣೆ ನೀತಿ ಸಂಹಿತೆಯ ನಡುವೆಯೂ ಅಲ್ಪಾವಧಿಯಲ್ಲಿ ನಿರೀಕ್ಷೆಗೂ ಮೀರಿ ಕೆಲಸ ಮಾಡಿದ್ದಾರೆ. 20 ಶಾಸಕರು ಸಿದ್ದರಾಮಯ್ಯ ವಿರುದ್ಧ ಅಸಮಾಧಾನಗೊಂಡಿದ್ದಾರೆ ಎಂಬ ಆರೋಪಕ್ಕೂ ಸಿದ್ದರಾಮಯ್ಯ ಚಾಮರಾಜನಗರ ಭೇಟಿಗೂ ತಳಕು ಹಾಕುವುದು ಬೇಡ. 5 ವರ್ಷ ಅಧಿಕಾರ ಪೂರೈಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.