ಟಿ. ನರಸೀಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಕ.ಪ್ರ.ವಾರ್ತೆ ಟಿ.ನರಸೀಪುರ ಅ. 10
ಮೈಸೂರು ರಸ್ತೆ ವಿಸ್ತರಣೆಗೆ ಆಗ್ರಹಿಸಿ, ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸಗಳು ಕುಂಠಿತಗೊಂಡಿರುವುದನ್ನು ಖಂಡಿಸಿ ಹಾಗೂ ಪಪಂ ವಾಣಿಜ್ಯ ಮಳಿಗೆಗಳಲ್ಲಿ ಅಕ್ರಮವನ್ನು ತನಿಖೆಗೊಳಪಡಿಸುವಂತೆ ಆಗ್ರಹಿಸಿ, ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಗುರುವಾರ ಪ್ರತಿಭಟಿಸಿದರು.
ಬೃಹತ್ ಪ್ರತಿಭಟನೆಗೆ ಗುರುವಾರ ಕರೆ ನೀಡಿದ್ದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಜಿಲ್ಲೆಯ ಮೂವರು ಚುನಾಯಿತ ಪ್ರತಿನಿಧಿಗಳು ಸರ್ಕಾರದಲ್ಲಿ ಪ್ರಮುಖ ಸ್ಥಾನಗಳನ್ನು ನಿರ್ವಹಿಸುತ್ತಿದ್ದು, ತಾಲೂಕಿನ ಸಮಸ್ಯೆಗಳನ್ನು ಬಗೆಹರಿಸದಿರುವುದಕ್ಕೆ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬಾಬುಜಗಜೀವನ್ ರಾಂ ಸಮುದಾಯ ಭವನದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ, ಖಾಸಗಿ ಬಸ್ ನಿಲ್ದಾಣದ ವೃತ್ತಕ್ಕೆ ತೆರಳಿ ಮಾನವ ಸರಪಳಿ ನಿರ್ಮಿಸಿ ವಾಹನಗಳ ಸಂಚಾರಕ್ಕೆ ತಡೆಯೊಡ್ಡಿದ್ದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ಸಿ. ರಮೇಶ್ ಮಾತನಾಡಿ, ತಾಲೂಕಿನಲ್ಲಿ ಅಭಿವೃದ್ಧಿ ಕಾಮಗಾರಿಗಳು ಸೇರಿದಂತೆ ಸರ್ಕಾರಿ ಕಚೇರಿಯಲ್ಲಿ ಸಾರ್ವಜನಿಕರ ಯಾವುದೇ ಕೆಲಸಗಳು ಆಗದಿರುವುದನ್ನು ನೋಡಿದಾಗ ರಾಜ್ಯದಲ್ಲಿ ಸರ್ಕಾರ ಅನ್ನೋದು ಇದೆಯೋ, ಇಲ್ಲವೋ ಎಂಬ ಅನುಮಾನ ಮೂಡುತ್ತದೆ. ಪಪಂ ಅಕ್ರಮಗಳನ್ನು ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು.
ತಾಲೂಕು ಕಚೇರಿಗೆ ತೆರಳಿ ತಹಸೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ತೋಟದಪ್ಪ ಬಸವರಾಜು, ಪಪಂ ಸದಸ್ಯೆ ರತ್ನಮ್ಮ, ಬಿಜೆಪಿ ಕ್ಷೇತ್ರಾಧ್ಯಕ್ಷ ಕೆ.ಎಸ್. ಬಸವರಾಜು, ಕಾರ್ಯದರ್ಶಿ ಎನ್.ಎಂ. ರಾಮಚಂದ್ರ, ಹಿರಿಯ ಮುಖಂಡ ಮಹದೇವಯ್ಯ, ಟೌನ್ ಅಧ್ಯಕ್ಷ ಎಸ್. ದಿಲೀಪ್, ತಾಪಂ ಸದಸ್ಯ ಬಸವರಾಜು ಭಾಗವಹಿಸಿದ್ದರು.