ಕೇಂದ್ರೀಯ ವಿದ್ಯಾಲಯ ಕಟ್ಟಡ ನಿರ್ಮಾಣಕ್ಕೆ ಶಂಕು
ಕ.ಪ್ರ.ವಾರ್ತೆ ಟಿ. ನರಸೀಪುರ ಅ. 19
ಗ್ರಾಮೀಣ ಪ್ರದೇಶಗಳಲ್ಲಿ ಉನ್ನತ ಶಿಕ್ಷಣ ನೀಡುವ ಸರ್ಕಾರಿ ಶಿಕ್ಷಣ ಕೇಂದ್ರಗಳನ್ನು ಸದ್ಬಳಕೆ ಮಾಡಿಕೊಂಡು ಮಕ್ಕಳ ಭವಿಷ್ಯವನ್ನು ಉತ್ತಮವಾಗಿ ರೂಪಿಸಬೇಕು ಎಂದು ಲೋಕೋಪಯೋಗಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಹೇಳಿದರು.
ತಾಲೂಕಿನ ಸೋಸಲೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ 3.71 ಕೋಟಿ ವೆಚ್ಚದ ಆದರ್ಶ ಕೇಂದ್ರೀಯ ವಿದ್ಯಾಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಪೋಷಕರಿಗೆ ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಸರ್ಕಾರಿ ಶಾಲೆಗಳ ಅಭಿವೃದ್ಧಿಯ ಬಗ್ಗೆ ಕಾಳಜಿ ಇರಬೇಕು ಎಂದರು.
ಸಂಸದ ಆರ್. ಧ್ರುವನಾರಾಯಣ ಮಾತನಾಡಿ, ಆದರ್ಶ ಶಾಲೆಯ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಶೇ.90ರಷ್ಟು ಮತ್ತು ರಾಜ್ಯ ಸರ್ಕಾರ ಶೇ.10ರಷ್ಟು ಅನುದಾನವನ್ನು ನೀಡುತ್ತದೆ. ಜನತೆಯೂ ಕೂಡ ಶೈಕ್ಷಣಿಕ ಚಟುವಟಿಕೆಗಳಿಗೆ ಪ್ರಾಮುಖ್ಯತೆ ಕೊಟ್ಟು, ಅಂಗನವಾಡಿ ಕೇಂದ್ರ ಹಾಗೂ ಶಾಲಾ ಕಟ್ಟಡಗಳಿಗೆ ಶಾಸಕರು ಮತ್ತು ಸಂಸದರಿಂದ ಅನುದಾನವನ್ನು ಕೇಳಿ ಪಡೆದುಕೊಳ್ಳಬೇಕು ಎಂದು ಹೇಳಿದರು.
ಜಿಪಂ ಉಪಾಧ್ಯಕ್ಷೆ ಎಸ್. ಭ್ರಮರಾಂಭ, ಸದಸ್ಯ ಕೆ. ಮಹದೇವ, ಎಸ್ಟಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೊನ್ನನಾಯ್ಕ, ಗ್ರಾಪಂ ಅಧ್ಯಕ್ಷ ಎಚ್. ಅಣ್ಣಯ್ಯಸ್ವಾಮಿ, ಉಪಾಧ್ಯಕ್ಷೆ ತಾಯಮ್ಮ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಕೆ. ವಜ್ರೇಗೌಡ, ಎಪಿಎಂಸಿ ಅಧ್ಯಕ್ಷ ಎಂ. ರಾಜು, ಚಾಮರಾಜನಗರ ಎಪಿಎಂಸಿ ಅಧ್ಯಕ್ಷ ಆಲ್ದೂರ್ ಸಿ. ರಾಜಶೇಖರ್, ತಾಪಂ ಸದಸ್ಯ ನಟರಾಜು, ಮಾಜಿ ಅಧ್ಯಕ್ಷ ಎಂ. ಮಲ್ಲಿಕಾರ್ಜುನಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ಎಚ್. ಮಂಜುನಾಥ್, ಎಸ್ಸಿ ಕಾಂಗ್ರೆಸ್ ಅಧ್ಯಕ್ಷ ಎ. ಶಿವಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಿ.ಕೆ. ಬಸವರಾಜು, ಸಹ ನಿರ್ದೇಶಕಿ ಸುವರ್ಣಾದೇವಿ, ಕ್ಷೇತ್ರ ಶಿಕ್ಷಣಾಧಿಕಾರಿ ಮರಿಸ್ವಾಮಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜೈಕೃಷ್ಣ ಇದ್ದರು.
ಮೊರಾರ್ಜಿ ಶಾಲೆಗೆ 6 ಕೋಟಿ ಅನುದಾನ
ಸೋಸಲೆ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ನಿರ್ಮಾಣಕ್ಕೂ 6 ಕೋಟಿ ಅನುದಾನವನ್ನು ನೀಡಲಾಗುವುದು ಎಂದು ಲೋಕೋಪಯೋಗಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಹೇಳಿದರು. ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ನಿವೇಶನವನ್ನು ಆಯ್ಕೆ ಮಾಡಿಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದಲೇ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ಸೋಸಲೆ ಗ್ರಾಮದ ಸಮಗ್ರ ಅಭಿವೃದ್ಧಿಗೆ ಸುಮಾರು 1 ಕೋಟಿ ಮಂಜೂರು ಮಾಡಲಾಗುವುದು. ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡದ ಕಾಮಗಾರಿ ಪ್ರಗತಿಯಲ್ಲಿದೆ. ನೆನೆಗುದಿಗೆ ಬಿದ್ದಿರುವ ಅಂಬೇಡ್ಕರ್ ಸಮುದಾಯ ಭವನ ಕಾಮಗಾರಿಯನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.