ಜಿಲ್ಲಾಡಳಿತದಿಂದ ಕನ್ನಡ ರಾಜ್ಯೋತ್ಸವಕ್ಕೆ ಸಿದ್ಧತೆ
ಕ.ಪ್ರ.ವಾರ್ತೆ ಮೈಸೂರು ಅ. 29
ನ.1ರಂದು ಕನ್ನಡ ರಾಜ್ಯೋತ್ಸವ ಆಚರಣೆಗೆ ಜಿಲ್ಲಾಡಳಿತವು ಸಕಲ ಸಿದ್ಧತೆ ಮಾಡಿಕೊಂಡಿದೆ.
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ನಡೆಯಲಿದ್ದು, ನ.1ರ ಬೆಳಗ್ಗೆ 9ಕ್ಕೆ ಕಂದಾಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸಪ್ರಸಾದ್ ಅವರು ಧ್ವಜಾರೋಹಣ ನೆರವೇರಿಸುವರು. ಲೋಕೋಪಯೋಗಿ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಮೇಯರ್ ಎನ್.ಎಂ. ರಾಜೇಶ್ವರಿ, ಜಿಪಂ ಅಧ್ಯಕ್ಷ ಕೂರ್ಗಳ್ಳಿ ಎಂ. ಮಹದೇವು, ಸಂಸದರು, ಶಾಸಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸುವರು.
ಅಂದು ಬೆಳಗ್ಗೆ 8.30ಕ್ಕೆ ಅರಮನೆ ಆವರಣದಲ್ಲಿರುವ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಕೆ, ಬೆಳಗ್ಗೆ 9ಕ್ಕೆ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ನಡೆಯಲಿದೆ. ರಾಜ್ಯೋತ್ಸವ ಅಂಗವಾಗಿ ಆಯೋಜಿಸಲಾಗಿರುವ ಮೆರವಣಿಗೆಯು ಕೆ.ಆರ್. ವೃತ್ತ, ಸಯ್ಯಾಜಿರಾವ್ ರಸ್ತೆ, ಇರ್ವಿನ್ ರಸ್ತೆ, ಅಶೋಕ ರಸ್ತೆ ಮೂಲಕ ಹಾದು ಪುರಭವನ ಬಳಿ ಅಂತ್ಯಗೊಳ್ಳಲಿದೆ.
ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ: ಅದೇ ದಿನ ಸಂಜೆ 5.30ಕ್ಕೆ ಕಲಾಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮೇಯರ್ ಎನ್.ಎಂ. ರಾಜೇಶ್ವರಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಶಾಸಕ ವಾಸು ಅಧ್ಯಕ್ಷತೆ ವಹಿಸುವರು. ಹಂಪಿ ವಿವಿ ವಿಶ್ರಾಂತ ಕುಲಪತಿ ಪ್ರೊ. ಎಚ್.ಜೆ. ಲಕ್ಕಪ್ಪಗೌಡ ಮುಖ್ಯ ಭಾಷಣ ಮಾಡುವರು.
ನಂತರ ವಿವಿಧ ಕ್ಷೇತ್ರಗಳಲ್ಲಿ ಸಾಧಕರನ್ನು ಸನ್ಮಾನಿಸಲಾಗುತ್ತದೆ. ಬಳಿಕ ಸುನಿತಾ ಚಂದ್ರಕುಮಾರ್ ತಂಡದಿಂದ ಕನ್ನಡ ಗೀತೆ, ವಿಜಯ ಮೂರ್ತಿ ತಂಡದಿಂದ ನೃತ್ಯ ಪ್ರದರ್ಶನ, ವಿವಿಧ ಶಾಲಾ- ಕಾಲೇಜು ವಿದ್ಯಾರ್ಥಿಗಳಿಂದ ಸಮೂಹ ನೃತ್ಯ, ನೆಹರು ಯುವ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ.
ಪ್ರೊ. ಸಿ. ನಾಗಣ್ಣಗೆ ರೋಟರಿ ರಾಜ್ಯೋತ್ಸವ ಪ್ರಶಸ್ತಿ
ರೋಟರಿ ಮೈಸೂರು ಉತ್ತರ ಸಂಸ್ಥೆಯು ಕನ್ನಡ ರಾಜ್ಯೋತ್ಸವ ಅಂಗವಾಗಿ ನೀಡುವ ರೋಟರಿ- ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವು ನ.1ರ ಸಂಜೆ 6.30ಕ್ಕೆ ಜೆಎಲ್ಬಿ ರಸ್ತೆಯಲ್ಲಿರುವ ರೋಟರಿ ಕೇಂದ್ರದಲ್ಲಿ ನಡೆಯಲಿದೆ. ಮೈಸೂರು ವಿವಿ ಪ್ರಸಾರಾಂಗ ನಿರ್ದೇಶಕ ಪ್ರೊ. ಸಿ. ನಾಗಣ್ಣ ಅವರಿಗೆ ರೋಟರಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ರೋಟರಿ ಜಿಲ್ಲಾ ರಾಜ್ಯಪಾಲ ಆರ್. ಕೃಷ್ಣ, ರೋಟರಿ ಮೈಸೂರು ಉತ್ತರ ಅಧ್ಯಕ್ಷ ಜಿ. ಶಿವಲಿಂಗಸ್ವಾಮಿ ಪಾಲ್ಗೊಳ್ಳುವರು ಎಂದು ಕಾರ್ಯದರ್ಶಿ ಮಹದೇವಪ್ಪ ತಿಳಿಸಿದ್ದಾರೆ.