ಆಸ್ಪತ್ರೆ ಅವ್ಯವಸ್ಥೆ ವಿರುದ್ಧ ಕಾವಲು ಪಡೆ ಪ್ರತಿಭಟನೆ
ಪಿರಿಯಾಪಟ್ಟಣ: ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಅವ್ಯವಸ್ಥೆ ಖಂಡಿಸಿ ಕರ್ನಾಟಕ ಕಾವಲುಪಡೆ ಕಾರ್ಯಕರ್ತರು ಗುರುವಾರ ಆಸ್ಪತ್ರೆ ಎದುರು ಪ್ರತಿಭಟಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಕಾವಲು ಪಡೆ ತಾಲೂಕು ಅಧ್ಯಕ್ಷ ಸುಬ್ರಹ್ಮಣ್ಯ ಮಾತನಾಡಿ, ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯದ ಕೊರತೆ ಇದೆ. ರೋಗಿಗಳನ್ನು ಕೆಲವು ವೈದ್ಯರು ತಪಾಸಣೆ ಮಾಡದೆ ಚಿಕಿತ್ಸೆಗೆ ಖಾಸಗಿ ಚಿಕಿತ್ಸಾಲಯಗಳಿಗೆ ಹಾಗೂ ಔಷಧಗಳನ್ನು ಖಾಸಗಿ ಔಷಧ ಅಂಗಡಿಗಳಲ್ಲಿ ಪಡೆಯುವಂತೆ ಬರೆದು ಕಳುಹಿಸುತ್ತಿದ್ದಾರೆ. ಇದರಿಂದಾಗಿ ಆಸ್ಪತ್ರೆಗೆ ಬರುವ ಬಡ ರೋಗಿಗಳು ಔಷಧ ತೆಗೆದುಕೊಳ್ಳಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಯು ಸುಸಜ್ಜಿತ ಕಟ್ಟಡ ಹೊಂದಿದ್ದರೂ ಮೂಲ ಸೌಲಭ್ಯದ ಕೊರತೆ ಕಾಡುತ್ತಿದೆ ಎಂದು ಆರೋಪಿಸಿದರು. ಎಕ್ಸರೆ, ಮೂತ್ರ ಪರೀಕ್ಷೆ, ರಕ್ತ ಪರೀಕ್ಷೆ ಇದ್ದರೂ ಖಾಸಗಿ ಲ್ಯಾಬ್‌ಗಳಿಗೆ ಇಲ್ಲಿನ ಕೆಲವು ವೈದ್ಯರು ರೋಗಿಗಳನ್ನು ಕಳುಹಿಸುತ್ತಿದ್ದಾರೆ. ಈ ಬಗ್ಗೆ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳು ಗಮನಹರಿಸಿ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು. ಕಾವಲುಪಡೆ ಕಾರ್ಯಕರ್ತರಾದ ಕಿಶೋರ್, ಮಹೇಶ್, ರಾಮಕೃಷ್ಣ, ಶರವಣ, ಆನಂದ್ ಇದ್ದರು.