ಸರ್ಕಾರದ ಸವಲತ್ತು ಬಳಕೆಗೆ ಸೂಚನೆ
ಕ.ಪ್ರ.ವಾರ್ತೆ ಬೈಲುಕುಪ್ಪೆ ಸೆ. 12
ಸರ್ಕಾರದ ಸವಲತ್ತು ಬಳಸಿಕೊಂಡು ಪ್ರತಿಯೊಬ್ಬರೂ ಮುಂದೆ ಬರಬೇಕೆಂದು ಬೈಲುಕುಪ್ಪೆ ಗ್ರಾಪಂ ಅಧ್ಯಕ್ಷ ರವಿಮಾನು ತಿಳಿಸಿದರು.
ಗ್ರಾಪಂ ಆವರಣದಲ್ಲಿ ಗುರುವಾರ ನಡೆದ ಗ್ರಾಮಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಕ್ಕಳು ಮತ್ತು ಗರ್ಭಿಣಿಯರಿಗೆ ಸರ್ಕಾರದಿಂದ ಬರುವ ಪೌಷ್ಟಿಕಾಂಶ ಆಹಾರವನ್ನು ಕಡ್ಡಾಯವಾಗಿ ವಿತರಿಸಬೇಕು. ಕಾವೇರಿ ಕಲ್ಪತರು ಗ್ರಾಮೀಣ ಬ್ಯಾಂಕ್ನಲ್ಲಿ ವಿವಿಧ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಉಳಿತಾಯ ಖಾತೆ ತೆರೆಯಲು ದಾಖಲಾತಿ ಒದಗಿಸಿದ್ದರೂ ಬ್ಯಾಂಕಿನವರು ವಿಳಂಬ ಮಾಡುತ್ತಿದ್ದಾರೆ. ಫಲಾನುಭವಿಗಳನ್ನು ದಿನನಿತ್ಯ ಅಲೆದಾಡಿಸುತ್ತಿದ್ದಾರೆ. ಈ ಬಗ್ಗೆ ದೂರು ನೀಡುವುದಾಗಿ ಹೇಳಿದರು.
ಈ ವೇಳೆ ಗ್ರಾಪಂನ ಎಲ್ಲಾ ವಾರ್ಡುಗಳ ವಸತಿರಹಿತರಿಗೆ ವಸತಿ ಸೌಲಭ್ಯ ಕಲ್ಪಿಸಲು ಫಲಾನುಭವಿಗಳನ್ನು ಆಯ್ಕೆ ಮಾಡಲು ಮತ್ತು ವಿವಿಧ ಯೋಜನೆ ಫಲಾನುಭವಿಗಳನ್ನು ಆಯ್ಕೆ ಮಾಡಲು ನಿರ್ಣಯ ಕೈಗೊಳ್ಳಲಾಯಿತು.
ಗ್ರಾಪಂ ಉಪಾಧ್ಯಕ್ಷೆ ಮಂಜುಳಮ್ಮ, ಸದಸ್ಯರಾದ ರಾಜು, ಶಿವರಾಜು, ರಮಣಿ, ಸುನೀತಾ, ನಿಸಾರ್, ಮಹದೇವ್, ಪಿಡಿಒ ಶಿವಯೋಗ, ಆರೋಗ್ಯ ಇಲಾಖೆ ಸಿಬ್ಬಂದಿ, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಇದ್ದರು.