ಗ್ರಾಮೀಣ ಪ್ರದೇಶ ಅಭಿವೃದ್ಧಿಗೆ ಅನುದಾನ
ಟಿ. ನರಸೀಪುರ: ಕಾಂಗ್ರೆಸ್ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಗ್ರಾಮಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ಸುನಿಲ್ಬೋಸ್ ಹೇಳಿದರು.
ತಾಲೂಕಿನ ತೊಟ್ಟವಾಡಿ ಗ್ರಾಮದಲ್ಲಿ ಕಾವೇರಿ ನೀರಾವರಿ ನಿಗಮದ ವಿಶೇಷ ಘಟಕ ಯೋಜನೆಯಡಿ 38.06 ಲಕ್ಷ ವೆಚ್ಚದಲ್ಲಿ ಸಿಮೆಂಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಿ ಮಾತನಾಡಿದ ಅವರು, ನರಸೀಪುರ ವಿಧಾನಸಭಾ ಕ್ಷೇತ್ರದ ಗ್ರಾಮಗಳನ್ನು ಅಭಿವೃದ್ಧಿಪಡಿಸಲು ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ ಅವರು ಮೊದಲ ಹಂತದಲ್ಲಿ ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ತಿಳಿಸಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ ಅಪಪ್ರಚಾರದ ನಡುವೆಯೂ ಕ್ಷೇತ್ರದ ಜನತೆ ನಮ್ಮ ತಂದೆಯವರನ್ನು ಕೈಬಿಡದೆ ಆಯ್ಕೆ ಮಾಡಿದ್ದರಿಂದ ಕಾಂಗ್ರೆಸ್ ಸರ್ಕಾರದಲ್ಲಿ ಲೋಕೋಪಯೋಗಿ ಇಲಾಖೆ ಸಚಿವರಾಗುವ ಅವಕಾಶ ಸಿಕ್ಕಿದೆ. ಜನರ ಭಾವನೆಗಳನ್ನು ಅರ್ಥ ಮಾಡಿಕೊಂಡು ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು.
ತಾಪಂ ಅಧ್ಯಕ್ಷ ತುಂಬಲ ಅಂದಾನಿ ಮಾತನಾಡಿದರು. ಜಿಪಂ ಉಪಾಧ್ಯಕ್ಷ ಎಸ್. ಭ್ರಮರಾಂಭ ಮಲ್ಲಿಕಾರ್ಜುನಸ್ವಾಮಿ, ತಾಪಂ ಉಪಾಧ್ಯಕ್ಷೆ ಸುಜಾತ ವೆಂಕಟೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ಎಚ್. ಮಂಜುನಾಥ್, ಮಾವಿನಹಳ್ಳಿ ಪುಟ್ಟಸ್ವಾಮಿ, ಸಿದ್ಧಶೆಟ್ಟಿ ಇದ್ದರು.