ಹಸಿರು ಕ್ರಾಂತಿಯ ಹರಿಕಾರ ಬಾಬುಜಿ ಸ್ಮರಣೆ
ಮೈಸೂರು: ಮಾಜಿ ಉಪಪ್ರಧಾನಿ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂ ಅವರ 107ನೇ ಜನ್ಮ ದಿನವನ್ನು ಜಿಲ್ಲಾಡಳಿತ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಶನಿವಾರ ಆಚರಿಸಲಾಯಿತು.ಜಿಲ್ಲಾ ಪಂಚಾಯತ್, ಮೈಸೂರು ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಇಲ್ಲಿನ ರೇಲ್ವೆ ನಿಲ್ದಾಣದ ಬಳಿ ಇರುವ ಡಾ.ಬಾಬು ಜಗಜೀವನರಾಂ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪ್ರಾದೇಶಿಕ ಆಯುಕ್ತೆ ಎಂ.ವಿ. ಜಯಂತಿ, ಜಿಲ್ಲಾಧಿಕಾರಿ ಸಿ.ಶಿಖಾ, ನಗರ ಪಾಲಿಕೆ ಆಯುಕ್ತ ರಮೇಶ್, ಎಂಡಿಎ ಆಯುಕ್ತ ಸಿ. ಪಾಲಯ್ಯ, ಪೊಲೀಸ್ ಆಯುಕ್ತ ಡಾ.ಎಂ.ಎ. ಸಲೀಂ, ಎಸ್ಪಿ ಅಭಿನವ್ ಖರೆ ಇದ್ದರು.
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕನ್ನಡಿಗರು ಕಡಿಮೆ
ಮೈಸೂರು: ದೇಶದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕನ್ನಡಿಗರ ಸಂಖ್ಯೆ ಕಡಿಮೆಯಿದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಪತಿ ಪ್ರೊ.ಎಂ.ಜಿ.ಕೃಷ್ಣನ್ ವಿಷಾದಿಸಿದರು. ಕರ್ನಾಟಕ ರಾಜ್ಯ ಮುಕ್ತ ವಿವಿಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಮುಕ್ತ ಗಂಗೋತ್ರಿಯ ತುಂಗಭದ್ರ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷೆ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ದಕ್ಷಿಣ ಕನ್ನಡದವರು ಬಹುದೊಡ್ಡ ಬ್ಯಾಂಕ್ಗಳನ್ನು ದೇಶಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ಆದರೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕನ್ನಡಿಗರ ಸಂಖ್ಯೆ ತೀರಾ ಕಡಿಮೆಯಿದ್ದು, ಈ ವಲಯದಲ್ಲಿ ಕೇರಳದವರು ಅಧಿಕ ಸಂಖ್ಯೆಯಲ್ಲಿದ್ದಾರೆ. ಅವರ ಯಶಸ್ಸಿಗೆ ಶ್ರದ್ಧೆಯೇ ಕಾರಣ. ನಮ್ಮಲ್ಲಿ ಚಲನಶೀಲತೆ ಕಡಿಮೆ. ಈ ದಿಸೆಯಲ್ಲಿ ಯುವಜನತೆಗೆ ಪ್ರೇರಣೆ ನೀಡುವುದು ಅವಶ್ಯಕ ಎಂದರು. ಇಂದಿನ ಆಧುನಿಕ ಪ್ರಪಂಚದಲ್ಲಿ ಇತರರ ಪೈಪೋಟಿ ಎದುರಿಸಬೇಕಾದರೆ ವಿದ್ಯಾರ್ಥಿಗಳಲ್ಲಿ ಆಲೋಚನಾ ಲಹರಿ ಬದಲಾಗಬೇಕು ಎಂದು ಆಶಿಸಿದರು. ಞತರಬೇತಿ ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ಇದ್ದರು.