ಮೂಲಭೂತ ಕರ್ತವ್ಯ ಪಾಲನೆ ಅಗತ್ಯ
ಚಾಮರಾಜನಗರ: ಸಂವಿಧಾನದತ್ತವಾದ ಮೂಲಭೂತ ಕರ್ತವ್ಯಗಳನ್ನು ಪರಿಪಾಲನೆ ಮಾಡುವುದು ನಾಗರಿಕರ ಹೊಣೆಯಾಗಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಿ.ಜಿ. ಸಾವಡ್ಕರ್ ಹೇಳಿದರು.
ನಗರದ ಜಿಲ್ಲಾ ನ್ಯಾಯಾಲಯದ ಅವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘಗಳ ಆಶ್ರಯದಲ್ಲಿ ವೃತ್ತಿನಿರತ ವ್ಯಕ್ತಿಗಳಿಗಾಗಿ ಹಮ್ಮಿಕೊಂಡಿದ್ದ ಮೂಲಭೂತ ಕರ್ತವ್ಯಗಳ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿ ಪ್ರಜೆಯು ಮೂಲಭೂತ ಹಕ್ಕುಗಳ ಜೊತೆ ಕರ್ತವ್ಯಗಳನ್ನು ಶ್ರದ್ಧೆಯಿಂದ ಪಾಲನೆ ಮಾಡಬೇಕು ಎಂದರು.
ಸಮಾಜದಲ್ಲಿ ಮೂಲಭೂತ ಕರ್ತವ್ಯಗಳ ಕುರಿತು ವ್ಯಾಪಕವಾಗಿ ತಿಳಿವಳಿಕೆ ನೀಡಬೇಕಿದೆ. ಈ ಹಿನ್ನಲೆಯಲ್ಲಿ ಕರ್ತವ್ಯಗಳ ಕುರಿತು ಜಿಲ್ಲೆಯಲ್ಲೂ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ 30 ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ವಿಶೇಷವಾಗಿ ವಿದ್ಯಾರ್ಥಿಗಳು, ಮಹಿಳೆಯರು, ವೃತ್ತಿನಿರತರಾದವರಿಗೆ ಮೂಲಭೂತ ಕರ್ತವ್ಯಗಳ ಪಾಲನೆ ಕುರಿತು ಜಾಗೃತಿ ಮೂಡಿಸಲು ಉದ್ದೇಶಿಸಲಾಗಿದೆ ಎಂದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪುಟ್ಟರಾಜು ಮಾತನಾಡಿ, ವೃತ್ತಿನಿರತ ವೈದ್ಯರು ಸೇರಿದಂತೆ ವಿವಿಧ ಸರ್ಕಾರಿ ಇಲಾಖೆ ಅಧಿಕಾರಿಗಳು ಸಂವಿಧಾನ ಆಶಯದಂತೆ ಮೂಲಭೂತ ಕರ್ತವ್ಯಗಳ ಬಗ್ಗೆ ಸಂಪೂರ್ಣ ಅರಿವು ಹೊಂದಬೇಕು ಎಂದರು. ಇದೇ ವೇಳೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಮೂಲಭೂತ ಕರ್ತವ್ಯಗಳ ಕುರಿತು ಪ್ರಕಟಿಸಿರುವ ಕರಪತ್ರವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪಾಂಡುವಿಜಯನ್ ಬಿಡುಗಡೆ ಮಾಡಿದರು.
ಶೀಘ್ರಗತಿ ನ್ಯಾಯಾಲಯದ ನ್ಯಾಯಾಧೀಶ ಮಹಮದ್ ಮುಜಾಹಿದ್ ಉಲ್ಲಾ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಭೃಂಗೇಶ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಸತ್ಯಾನಂದ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸಂಪತ್ಕುಮಾರ್, ಕೊಳ್ಳೇಗಾಲ ವಕೀಲರ ಸಂಘದ ಅಧ್ಯಕ್ಷ ಎಂ. ಮಲ್ಲಿಕಾರ್ಜುನ, ಯಳಂದೂರು ವಕೀಲರ ಸಂಘದ ಅಧ್ಯಕ್ಷ ಸಿದ್ಧರಾಜು, ಗುಂಡ್ಲುಪೇಟೆ ವಕೀಲರ ಸಂಘದ ಅಧ್ಯಕ್ಷ ಬಿ. ಶಿವಣ್ಣ, ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ನಾಗರಾಜು ಇದ್ದರು.