200 ಡಿಎಲ್ ಅಮಾನತಿಗೆ ಕ್ರಮ: ಆಯುಕ್ತ ಡಾ.ಸಲೀಂ
ಕ.ಪ್ರ.ವಾರ್ತೆ ಮೈಸೂರು ಏ. 28
ನಗರದಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ. ಕಳೆದ ಒಂದು ವಾರದಲ್ಲಿ ಕುಡಿದು ಚಾಲನೆ ಮಾಡಿದ 200 ಮಂದಿಯ ಚಾಲನಾ ಪರವಾನಗಿ (ಡಿಎಲ್) ಅಮಾನತುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತ ಡಾ.ಎಂ.ಎ. ಸಲೀಂ ತಿಳಿಸಿದ್ದಾರೆ.
ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದರಿಂದ ರಸ್ತೆ ಅಪಘಾತಗಳು ಸಂಭವಿಸಿ ಅನೇಕರು ಗಾಯಗೊಂಡು, ಪ್ರಾಣ ಹಾನಿಯಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದನ್ನು ನಿಯಂತ್ರಿಸುವ ಸಲುವಾಗಿ ಸಂಚಾರ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಈ ಹಿಂದೆ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ 2 ಪ್ರಕರಣಗಳು ದಾಖಲಾದ ನಂತರ ಅವರ ಡಿಎಲ್ ಅಮಾನತುಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿತ್ತು. ಆದರೆ ಈಗ ಮೊದಲನೆ ಪ್ರಕರಣದಲ್ಲಿಯೇ ಡಿಎಲ್ ಅಮಾನತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.
ಏ.21 ರಿಂದ 27 ರವರೆಗೆ ನಗರ ಸಂಚಾರ ಪೊಲೀಸರು ವಿಶೇಷ ತಪಾಸಣೆ ನಡೆಸಿ ಒಟ್ಟು 200 ಪ್ರಕರಣಗಳನ್ನು ಹೂಡಿದ್ದು, ಈ ವಾಹನ ಚಾಲಕರ ಡಿಎಲ್ ಅಮಾನತುಗೊಳಿಸುವ ಕ್ರಮ ವಹಿಸಲಾಗಿದೆ. ಹೀಗಾಗಿ ಸಾರ್ವಜನಿಕರು ಮದ್ಯಪಾನ ಮಾಡಿ ವಾಹನ ಚಾಲನೆ ಮಾಡದಂತೆ ಪೊಲೀಸ್ ಆಯುಕ್ತರು ಮನವಿ ಮಾಡಿದ್ದಾರೆ.