ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ

Vishwanath S
Updated On : 5 Feb 2014, 12:04 pm

ಮೈಸೂರು: ಶಿಕ್ಷಣ ಕ್ಷೇತ್ರಕ್ಕೆ 2014-15ನೇ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ಚಿನ ಅನುದಾನ ನೀಡಬೇಕು ಎಂದು ದಕ್ಷಿಣ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ ಆಗ್ರಹಿಸಿದರು.
ಹೆಚ್ಚಿನ ಅನುದಾನವನ್ನು ಬಜೆಟ್‌ನಲ್ಲಿ ನಿಗದಿಪಡಿಸಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವುದಾಗಿ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರೌಢಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳ ಬೋಧಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಈ ಸಂಬಂಧ ಐಎಎಸ್ ಅಧಿಕಾರಿ ಕುಮಾರನಾಯಕ್ ನೀಡಿರುವ ವರದಿಯಲ್ಲಿ ಪ್ರತಿಯೊಬ್ಬರಿಗೂ 1500 ಮೂಲ ವೇತನಕ್ಕೆ ಸೇರಿಸಲು ಶಿಫಾರಸು ಮಾಡಿದ್ದಾರೆ. ಈ ವರದಿಯನ್ನು ಅನುಷ್ಠಾನಗೊಳಿಸಿ, ಬಜೆಟ್‌ನಲ್ಲಿ ಬೋಧಕರಿಗೆ ಅನುದಾನ ನೀಡಬೇಕು ಎಂದು ಒತ್ತಾಯಿಸಿದರು.
1995ನೇ ಸಾಲಿನವರೆಗೆ ಆರಂಭವಾಗಿರುವ ಎಲ್ಲ ವರ್ಗದ ಪದವಿ ಕಾಲೇಜುಗಳ ಬೋಧಕ ಮತ್ತು ಬೋಧಕೇತರರಿಗೂ ವೇತನ ಅನುದಾನ ನೀಡಬೇಕು. ಅನುದಾನಿತ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಬೇಕು. ಪದವಿ, ಬಿ.ಇಡಿ, ವಿವಿ, ಎಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಅಧ್ಯಾಪಕರಿಗೆ 2006 ರಿಂದ ಜಾರಿಗೆ ಬಂದಿರುವ ಯುಜಿಸಿ/ಎಐಸಿಟಿಇ ವೇತನ ಬಾಕಿ ಇದೆ. 51 ತಿಂಗಳ ಪರಿಷ್ಕೃತ ವೇತನ ಬಾಕಿ 700 ಕೋಟಿ ಬಜೆಟ್‌ನಲ್ಲಿ ಒದಗಿಸಬೇಕು ಎಂದು ಆಗ್ರಹಿಸಿದರು.
ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಕನಿಷ್ಠ ಮಾಸಿಕ 20,000 ಗೌರವಧನ ನಿಗದಿಪಡಿಸಿ, ಪ್ರತಿ ತಿಂಗಳು ಕ್ರಮವಾಗಿ ಗೌರವ ಧನ ಬಿಡುಗಡೆಗೊಳಿಸಬೇಕು. ಮೈಸೂರು ನಗರದಲ್ಲಿರುವ ಸರ್ಕಾರಿ ಸಿಪಿಸಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಂಜೆ ಪಾಲಿಟೆಕ್ನಿಕ್ ಆರಂಭಿಸಲು ಬಜೆಟ್‌ನಲ್ಲಿ ಅನುದಾನ ನಿಗದಿಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement