ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ರಾಜಕಾರಣದಲ್ಲಿ ಏನು ಬೇಕಾದ್ರೂ ಆಗಬಹುದು

Vishwanath S
Updated On : 7 Feb 2014, 11:23 am

ಮೈಸೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ಮತ್ತೆ ಪ್ರಧಾನಿ ಆಗುವ ಆಸೆ ಇಲ್ಲದಿರಬಹುದು. ಆದರೆ, ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾರ್ಮಿಕವಾಗಿ ಹೇಳಿದರು.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತೃತೀಯ ರಂಗದಿಂದ ಪ್ರಧಾನಿ ಅಭ್ಯರ್ಥಿ ಯಾರೆಂದು ಈಗಲೇ ಘೋಷಿಸುವುದು ಸರಿಯಲ್ಲ. ಚುನಾವಣಾ ಫಲಿತಾಂಶ ಬಂದ ನಂತರ ಪ್ರಧಾನಿ ಅಭ್ಯರ್ಥಿ ಆಯ್ಕೆ ಮಾಡುವುದಾಗಿ ಸಿಪಿಎಂ ನಾಯಕರು ಹೇಳಿಕೆ ನೀಡಿದ್ದಾರೆ. ಆದರೂ ಸಹ ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎಂದರು. ಲೋಕಸಭಾ ಚುನಾವಣೆ ಘೋಷಣೆಗೂ ಮೊದಲೇ ತೃತೀಯ ರಂಗದ ಸ್ವರೂಪ ನಿರ್ಧರಿಸಲಾಗುವುದು ಎಂದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ 15-16 ಸ್ಥಾನ ಗೆಲ್ಲುವ ಗುರಿ ತಲುಪಿದರೇ ಕರ್ನಾಟಕಕ್ಕೆ ಅವಕಾಶ ಸಿಗಬಹುದು. ಇದರಿಂದ ಕರ್ನಾಟಕದ ಬಹುದಿನಗಳ ಬೇಡಿಕೆಗಳನ್ನು ಈಡೇರಿಸಬಹುದು. ತೃತೀಯ ರಂಗದಲ್ಲಿ ಸ್ಥಳೀಯ ಸಣ್ಣಪುಟ್ಟ ಪಕ್ಷಗಳೊಂದಿಗೆ ಸೇರಿ ಕೆಲಸ ಮಾಡಲು ಮುಕ್ತ ಅವಕಾಶವಿದೆ. ಆದರೆ, ಸಾರ್ವಜನಿಕರಿಂದ ಟೀಕೆಗೆ ಗುರಿಯಾಗಿರುವ ಪಕ್ಷಗಳೊಂದಿಗೆ (ಬಿಎಸ್‌ಆರ್ ಕಾಂಗ್ರೆಸ್) ಕೈ ಜೋಡಿಸುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಅವರು ಪ್ರತಿಕ್ರಿಯಿಸಿದರು.
ತೃತೀಯ ರಂಗಕ್ಕೆ ಸ್ಪಷ್ಟ ಸ್ವರೂಪ ನೀಡುವ ಸಂಬಂಧ ದೆಹಲಿಯಲ್ಲಿ ಫೆ.10, 11 ರಂದು ಎರಡನೇ ಸುತ್ತಿನ ಮಾತುಕತೆ ನಡೆಯಲಿದೆ. ಚುನಾವಣೆ ಘೋಷಣೆ ಮುನ್ನವೆ ತೃತೀಯ ರಂಗ ರಚನೆ ಆಗಲಿದೆ. ರಾಜ್ಯದ 28 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ನಿಲ್ಲಿಸಲು ಸಿದ್ದವಾಗಿದ್ದೇವೆ. ಮಿತ್ರ ಪಕ್ಷಗಳಾದ ಸಮಾಜವಾದಿ, ಕಮ್ಯುನಿಸ್ಟ್ ಅಭ್ಯರ್ಥಿಗಳಿಗೆ ಕೆಲವು ಕ್ಷೇತ್ರಗಳನ್ನು ಬಿಟ್ಟು ಕೊಡಬೇಕಾಗಿದೆ. ಇದೇ ತಿಂಗಳಿನಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು. ಅಂತಿಮ ನಿರ್ಧಾರವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು ಕೈಗೊಳ್ಳುವರು ಎಂದು ಅವರು ಹೇಳಿದರು.
ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ 40 ಮಂದಿ ಶಾಸಕರೂ ಸಹ ಸ್ಪರ್ಧಿಸದಿರಲು ತೀರ್ಮಾನಿಸಿದ್ದೇವೆ. ಆದರೆ, ಅನಿವಾರ್ಯವಾದಲ್ಲಿ ಒಂದೆರಡು ಕ್ಷೇತ್ರಗಳಲ್ಲಿ ಹಾಲಿ ಶಾಸಕರನ್ನು ಸ್ಪರ್ಧೆಗೆ ಇಳಿಸಲಾಗುವುದು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement