ಸಾರಿಗೆ ಕಚೇರಿಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ
ಮೈಸೂರು: ರಾಜ್ಯದ ಎಲ್ಲಾ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು ಎಂದು ಆಗ್ರಹಿಸಿ ಪ್ರಜಾಶಕ್ತಿ ಆಂದೋಲನ ವೇದಿಕೆ ಕಾರ್ಯಕರ್ತರು ಬುಧವಾರ ನಗರದ ಸಾರಿಗೆ ಉಪ ಆಯುಕ್ತರ ಕಚೇರಿ ಬಳಿ ಪ್ರತಿಭಟಿಸಿದರು.
ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಭ್ರಷ್ಟಾಚಾರ ಹೆಮ್ಮರವಾಗಿ ಬೆಳೆಯುತ್ತಿದೆ. ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮತ್ತು ನೌಕರರು ಸರ್ಕಾರದ ಆದೇಶ, ನೀತಿ- ನಿಯಮ ಗಾಳಿಗೆ ತೂರಿ ಮನಸ್ಸೋ ಇಚ್ಛೆ ಕೆಲಸ ನಿರ್ವಹಿಸುತ್ತಿದ್ದಾರೆ.
ಡಿಎಲ್ ಮತ್ತು ಆರ್‌ಸಿ ಸ್ಮಾರ್ಟ್ ಕಾರ್ಡ್‌ಗಳನ್ನು ಅಂಚೆ ಮೂಲಕ ರವಾನೆ ಮಾಡಬೇಕಿದ್ದರೂ ಕೆಲವು ಅಧಿಕಾರಿಗಳು ಪಾಲಿಸುತ್ತಿಲ್ಲ ಎಂದು ಆರೋಪಿಸಿದರು.
ಕೆಲವು ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ರಾಜ್ಯ ಸರ್ಕಾರದ ಸಕಾಲ ಯೋಜನೆ ಸಮರ್ಪಕವಾಗಿ ಜಾರಿ ಆಗಿಲ್ಲ. ಮಧ್ಯವರ್ತಿಗಳ ಹಾವಳಿ ಹೆಚ್ಚಿದೆ. ಶಾಲಾ ಕಾಲೇಜುಗಳ ವಾಹನಗಳಲ್ಲಿ ಮಕ್ಕಳನ್ನು ಕುರಿಗಳಂತೆ ತುಂಬುತ್ತಿದ್ದರೂ ಅಧಿಕಾರಿಗಳು ಕಣ್ಮುಚ್ಚಿ ಕುಳಿತ್ತಿದ್ದಾರೆ. ಸರ್ಕಾರಿ ಆದೇಶಕ್ಕೆ ವಿರುದ್ಧವಾಗಿ ಕೂಲಿಂಗ್ ಪೇಪರ್ ಇದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
ಸಾರಿಗೆ ಕಚೇರಿಗಳಲ್ಲಿ ಪ್ರತಿಯೊಂದಕ್ಕೂ ಲಂಚ ಪಡೆಯಲಾಗುತ್ತಿದೆ. ಆದ್ದರಿಂದ ಈ ಸಂಬಂಧ ಹಿರಿಯ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಅಲ್ಲದೆ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ದ್ಯಾವಪ್ಪನಾಯಕ, ಎಸ್. ಶ್ರೀಧರ ಬೆಟ್ಟ, ಪ್ರಭಾಕರ್, ಎಚ್.ಎನ್. ನಂಜುಂಡಸ್ವಾಮಿ, ಕೆರೆಹಳ್ಳಿ ಮಾದೇಶ್, ಪ್ರಕಾಶ್ ಇದ್ದರು.