ರಾಜಾಕಾಂತ್ ಬಿಡುಗಡೆಗೆ ಒತ್ತಾಯ
ಟಿ. ನರಸೀಪುರ: ದಸಂಸ ರಾಜ್ಯ ಸಂಘಟನಾ ಸಂಚಾಲಕ ಕೆ.ಸಿ. ರಾಜಾಕಾಂತ್ ಅವರ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಿ, ನ್ಯಾಯಾಂಗ ಬಂಧನದಲ್ಲಿಟ್ಟಿರುವ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ದಮನಕಾರಿ ನೀತಿ ಅನುಸರಿಸುತ್ತಿದೆ ಎಂದು ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಆಲಗೂಡು ಶಿವಕುಮಾರ್ ಆರೋಪಿಸಿದರು. ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಹೋಬಳಿ ನುಗಿತಹಳ್ಳಿ ಗ್ರಾಮದಲ್ಲಿ 4 ಎಕರೆ ಭೂಮಿಯನ್ನು ಹೊಂದುವ ಹಕ್ಕು ಪೂಜಪ್ಪ ಹಾಗೂ ಮುನಿಸ್ವಾಮಿ ಅವರಿಗಿತ್ತಾದರೂ ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ ಹಾಗೂ ಉಪ ತಹಸೀಲ್ದಾರ್ ಅವರು ರಾಜಾರತ್ನಂ ಎಂಬವರಿಗೆ ಖಾತೆ ಮಾಡಿಕೊಟ್ಟಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ಕೆ.ಸಿ. ರಾಜಾಕಾಂತ್ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಿ ಬಂಧನದಲ್ಲಿಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು. ಕೂಡಲೆ ಸರ್ಕಾರ ಮಧ್ಯ ಪ್ರವೇಶಿಸಿ ಕೆ.ಸಿ. ರಾಜಕಾಂತ್ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ದಸಂಸ ತಾಲೂಕು ಸಂಚಾಲಕ ರಾಜು ಇದ್ದರು.