ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ನರೇಂದ್ರ ಮೋದಿ ಹೇಳಿಕೆ ಹಾಸ್ಯಾಸ್ಪದ: ಭಾಸ್ಕರ್ ಟೀಕೆ

Rashmi Kasaragodu
Updated On : 21 Feb 2014, 1:16 am

ಮೈಸೂರು: ಭ್ರಷ್ಟರ ನಡುವೆ ಕುಳಿತು ಭ್ರಷ್ಟಾಚಾರದ ಬಗ್ಗೆ ಬಹಿರಂಗ ಸಭೆಯಲ್ಲಿ ಮಾತನಾಡಿದ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ಹೇಳಿಕೆ ಹಾಸ್ಯಾಸ್ಪದ ಎಂದು ನಗರ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಎನ್. ಭಾಸ್ಕರ್ ಟೀಕಿಸಿದ್ದಾರೆ.
ಕಾಂಗ್ರೆಸ್ ಎಲ್ಲಿ ಅಧಿಕಾರದಲ್ಲಿದೆಯೋ ಅಲ್ಲೆಲ್ಲಾ ಭ್ರಷ್ಟಾಚಾರ ವ್ಯಾಪಕವಾಗಿದೆ ಎಂದು ದಾವಣಗೆರೆಯ ಬಿಜೆಪಿ ಬಹಿರಂಗ ಸಭೆಯಲ್ಲಿ ಮೋದಿ ಮಾತನಾಡಿದ್ದಾರೆ.
ರಾಜ್ಯದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಮಾಡಿ ಜೈಲಿಗೆ ಹೋಗಿ ಬಂದಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ತಮ್ಮ ಪಕ್ಕದಲ್ಲಿಯೇ ಕೂರಿಸಿಕೊಂಡು ಇಂತಹ ಹೇಳಿಕೆ ಕೊಟ್ಟಿರುವುದು ಸಮಂಜಸವಲ್ಲ ಎಂದು ಅವರು ಹೇಳಿದ್ದಾರೆ.  
ದೇಶದಲ್ಲಿ ಭ್ರಷ್ಟಾಚಾರ ಮಾಡಿ ಜೈಲಿಗೆ ಹೋಗಿರುವ ಮುಖ್ಯಮಂತ್ರಿಗಳು ಯಾರಾದರೂ ಕಾಂಗ್ರೆಸ್ನಲ್ಲಿ ಇದ್ದರೆ ಅಂಥವರ ಹೆಸರನ್ನು ಬಹಿರಂಗ ಪಡಿಸಲಿ. ಬರಿ ಪ್ರಚಾರಕ್ಕಾಗಿ ಕಾಂಗ್ರೆಸ್ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುವ ಮೋದಿ ಅವರು, ತಮ್ಮದೇ ಪಕ್ಷದ ಮುಂಚೂಣಿ ನಾಯಕರು ಮತ್ತು ಸಚಿವರು ವಿವಿಧ ಭ್ರಷ್ಟಾಚಾರ, ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯಗಳನ್ನು ಮನಗಾಣಬೇಕು ಎಂದಿದ್ದಾರೆ.                                                
ಪ್ರಧಾನಿಯಾಗುವ ಹಗಲು ಕನಸು ಕಾಣುತ್ತಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ದಿಲ್ಲಿಯ ಗದ್ದುಗೆ ಏರಲು ಸಾಧ್ಯವಿಲ್ಲ. ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಎಲ್ಲ ವರ್ಗಗಳಿಗೂ ಉತ್ತಮ ಬಜೆಟ್ ಮಂಡಿಸಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಹುಲ್ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement