ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ರಾಜಕೀಯದಲ್ಲಿ ಶತ್ರುತ್ವ ಸಮಾಜಕ್ಕೆ ಅಪಾಯಕಾರಿ

Rashmi Kasaragodu
Updated On : 25 Feb 2014, 2:19 am

ಕೆ.ಆರ್ ನಗರ: ರಾಜಕೀಯದಲ್ಲಿ ಯಾರು ಶತ್ರುಗಳಾಗಬಾರದು, ಕೇವಲ ವಿರೋಧಿಗಳಾಗಬೇಕು. ಶತ್ರುತ್ವ ಸಮಾಜಕ್ಕೆ ತುಂಬಾ ಅಪಾಯಕಾರಿ. ಅದರಿಂದ ಆರೋಗ್ಯಕಾರಿ ಸಮಾಜ ನಿರ್ಮಾಣಕ್ಕೆ ಮಾರಕವಾಗುತ್ತದೆ ಎಂದು ಕಂದಾಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸಪ್ರಸಾದ್ ಹೇಳಿದರು.
ಪಟ್ಟಣದ ಹೆರಿಗೆ ಆಸ್ಪತ್ರೆ ಆವರಣದಲ್ಲಿ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ ಯೋಜನೆಯಡಿ 8 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ 30 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ರಾಜಕಾರಣಿಗಳಿಗೆ ಅಭಿವೃದ್ಧಿಯೇ ಮೂಲ ಮಂತ್ರವಾಗಬೇಕು ಎಂದರು.
ಕೆ.ಆರ್. ನಗರ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಶಾಸಕ ಸಾ.ರಾ. ಮಹೇಶ್ ಅವರೊಂದಿಗೆ ಚರ್ಚಿಸಿ ಸಂಪೂರ್ಣ ಸಹಕಾರ ನೀಡುತ್ತೇನೆ. ಜೊತೆಗೆ, ಪಟ್ಟಣದಲ್ಲಿ ನಿರ್ಮಾಣವಾಗಿರುವ ಮಿನಿ ವಿಧಾನಸೌಧದ ಎರಡನೇ ಹಂತದ ಕಾಮಗಾರಿಗೆ 5 ಕೋಟಿ ಬಿಡುಗಡೆ ಮಾಡಿಸುತ್ತೇನೆ. ಕಳೆದ ಎರಡು ವರ್ಷದಿಂದ ಕಬ್ಬು ಅರೆಯುವ ಕಾರ್ಯ ಸ್ಥಗಿತಗೊಳಿಸಿರುವ ಚುಂಚನಕಟ್ಟೆ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆಯ ಪುನಶ್ಚೇತಕ್ಕೂ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದರು. ರಾಜ್ಯದ ಕಾಂಗ್ರೆಸ್ ಸರ್ಕಾರ ಸದಾ ಜನಪರ, ಬಡವರ ಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಜಿಲ್ಲೆಯ ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ದೃಷ್ಟಿಯಿಂದ ಮೈಸೂರಿನ ಸ್ಯಾನಿಟೋರಿಯಂ ಆಸ್ಪತ್ರೆಯ ಪಕ್ಕ 118 ಕೋಟಿ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತಿದೆ. ರಾಜ್ಯದಲ್ಲಿಯೇ 2ನೇ ಅತಿ ದೊಡ್ಡ ಆಸ್ಪತ್ರೆ ಇದಾಗಿದೆ. ಜಿಲ್ಲೆಯಲ್ಲಿ ಸರ್ಕಾರಿ ಜಾಗಗಳು ಇರುವೆಡೆ ಸರ್ಕಾರಿ ಕಟ್ಟಡಗಳು ಮತ್ತು ಹೆರಿಗೆ ಆಸ್ಪತ್ರೆ ನಿರ್ಮಾಣಕ್ಕೆ ಅದ್ಯತೆ ನೀಡಲಾಗುತ್ತದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಶಾಸಕ ಸಾ.ರಾ. ಮಹೇಶ್ ಮಾತನಾಡಿ, ತಾಲೂಕಿನ ಸಮಗ್ರ ಅಭಿವೃದ್ಧಿಗೆ ನಾನು ಕಂಕಣ ಬದ್ಧ. ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಶಿಕ್ಷಣ ಆರೋಗ್ಯ ಸೇರಿದಂತೆ ಇತರ ಮೂಲಸೌಲಭ್ಯ ಕಲ್ಪಿಸಲು ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಹಕಾರದಿಂದ ಅಗತ್ಯ ಅನುದಾನ ತರುವುದಾಗಿ ತಿಳಿಸಿದರು.
ತಾಪಂ ಅಧ್ಯಕ್ಷೆ ಶಶಿಕಲಾ ರಮೇಶ್, ಜಿಪಂ ಸದಸ್ಯ ರಾಜಯ್ಯ, ತಾಪಂ ಮಾಜಿ ಉಪಾಧ್ಯಕ್ಷ ಹಾಡ್ಯ ಮಹದೇವಸ್ವಾಮಿ, ಸದಸ್ಯರಾದ ಕವಿತಾರವಿ, ನಾಗಣ್ಣ, ತಂದ್ರೆರವಿ, ಪುರಸಭಾ ಮಾಜಿ ಅಧ್ಯಕ್ಷೆ ಗೀತಾ ಮಹೇಶ್, ಸದಸ್ಯರಾದ ಶಿವಕುಮಾರ್, ಕೆ.ಎಲ್. ಜಗದೀಶ್, ಕೆ.ಬಿ. ಸುಬ್ರಮಣ್ಯ, ಮೈಮುಲ್ ಮಾಜಿ ಅಧ್ಯಕ್ಷ ಎ.ಟಿ. ಸೋಮಶೇಖರ್, ಎಪಿಎಂಸಿ ನಿರ್ದೇಶಕರಾದ ಸೋಮು, ಕುಚೇಲ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಪುಟ್ಟಸ್ವಾಮಿ, ತಾ. ಆರೋಗ್ಯಾಧಿಕಾರಿ ಡಾ. ಶಿವಪ್ರಸಾದ್, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ರಾಮಚಂದ್ರ, ದಲಿತ ಮುಖಂಡ ನಾಗರಾಜು ಇದ್ದರು.


ಕ್ಷಮೆ ಕೋರಿದ ಪ್ರಸಾದ್...
ಅಧಿಕಾರಿಗಳು ಮಾಡಿದ ತಪ್ಪಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸಪ್ರಸಾದ್ ಕ್ಷಮೆ ಕೇಳಿದ ಪ್ರಸಂಗ ನಡೆಯಿತು. ಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 3.5 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಪರಿಶಿಷ್ಟ ಸಮಾಜದ ವಿದ್ಯಾರ್ಥಿ ನಿಲಯದ ಕಾಮಗಾರಿ ಶಂಕುಸ್ಥಾಪನೆ ಸಮಾರಂಭದ ಆಹ್ವಾನ ಪತ್ರಿಕೆಗೆ ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಅವರ ಹೆಸರನ್ನು ಹಾಕಿಸದಿದ್ದದ್ದು ಘಟನೆಗೆ ಕಾರಣವಾಯಿತು. ವಿದ್ಯಾರ್ಥಿನಿಯಲದ ಕಾಮಗಾರಿಗೆ ಸಚಿವ ವಿ. ಶ್ರೀನಿವಾಸಪ್ರಸಾದ್ ಮತ್ತು ಶಾಸಕ ಸಾ.ರಾ. ಮಹೇಶ್ ಅವರು ಭೂಮಿ ಪೂಜೆ ನೆರವೇರಿಸುತ್ತಿದ್ದಾಗ ಸ್ಥಳಕ್ಕೆ ಬಂದ ತಾ. ಆದಿಜಾಂಬವ ಸಂಘದ ಅಧ್ಯಕ್ಷ ಎಂ. ಲೋಕೇಶ್ ಮತ್ತು ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆಯ ಮಾಜಿ ನಿರ್ದೇಶಕ ಕಾಳಯ್ಯ ಅಧಿಕಾರಿಗಳ ಧೋರಣೆಯನ್ನು ಖಂಡಿಸಿದರಲ್ಲದೆ, ಈ ಬಗ್ಗೆ ಸಚಿವರಿಗೆ ದೂರಿದರು. ನಂತರ ಆಸ್ಪತ್ರೆ ಕಾಮಗಾರಿಯ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ ಪ್ರಸಾದ್ ಅವರು, ಶಿಷ್ಠಾಚಾರದ ಪ್ರಕಾರ ಸಮಾಜ ಕಲ್ಯಾಣ ಸಚಿವರ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಹಾಕಿಸಬೇಕಿತ್ತು. ಅಧಿಕಾರಿಗಳು ಮುಂದೆ ಈ ರೀತಿ ತಪ್ಪು ಮಾಡಬಾರದು ಎಂದು ಸಲಹೆ ನೀಡಿ, ಈಗ ಆಗಿರುವ ತಪ್ಪಿಗೆ ನಾನು ಕ್ಷಮೆ ಯಾಚಿಸುತ್ತೇನೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement