ಬಿಜೆಪಿ ಸರ್ಕಾರದ ಕಾರ್ಯಕ್ರಮಗಳು ಈಗ ಪೂರ್ಣ: ಕಾಪುಸಿ
ಟಿ. ನರಸೀಪುರ: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನುಷ್ಠಾನಗೊಳಿಸಿದ ಯೋಜನೆ ಹಾಗೂ ಅಭಿವೃದ್ಧಿ ಕಾಮಗಾರಿಗಳು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಷ್ಟೇ ಪೂರ್ಣಗೊಳ್ಳುತ್ತಿವೆ ಎಂದು ಲೋಕಸಭಾ ಚುನಾವಣಾ ಉಸ್ತುವಾರಿ ಸಮಿತಿ ಸದಸ್ಯ, ಬಿಜೆಪಿ ಮುಖಂಡ ಕಾ.ಪು. ಸಿದ್ದಲಿಂಗಸ್ವಾಮಿ ಹೇಳಿದರು.
ವರುಣ ವಿಧಾನಸಭಾ ಕ್ಷೇತ್ರದ ಆಲನಹಳ್ಳಿ ಬಿಜೆಪಿ ಕಚೇರಿಯಲ್ಲಿ ನಡೆದ ಬೂತ್ ಮಟ್ಟದ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ವರ್ಷವಾಗುತ್ತಿದ್ದರೂ ಹೇಳಿಕೊಳ್ಳುವಂಥ ಯಾವುದೇ ಶಾಶ್ವತ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ನೀಡಿಲ್ಲ. ರಾಜ್ಯ ಹಾಗೂ ಜಿಲ್ಲೆಯಲ್ಲಿ ಬಿಜೆಪಿ ಸರ್ಕಾರ ಮಂಜೂರು ಮಾಡಿದ್ದ ಕಾಮಗಾರಿಗಳು ಮಾತ್ರ ಪೂರ್ಣಗೊಂಡು ಉದ್ಘಾಟನೆಯಾಗುತ್ತಿವೆ ಎಂದರು.
ಗುಜರಾತ್ನ ಅಭಿವೃದ್ಧಿ ದೇಶದಲ್ಲೆಡೆ ವಿಸ್ತರಣೆಯಾಗಬೇಕು. ದೇಶಭಕ್ತ ನರೇಂದ್ರ ಮೋದಿ ಅವರು ಪ್ರಧಾನಿಯಾಗಬೇಕು. ದೇಶಕ್ಕಾಗಿ ನಾವು, ನಮಗಾಗಿ ನರೇಂದ್ರ ಮೋದಿ ನಾಯಕತ್ವ ಬೇಕಿದೆ. ವರುಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರೆಲ್ಲರೂ ಮತದಾರರ ಮನೆ ಬಾಗಿಲಿಗೆ ತೆರಳಿ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಮತ ನೀಡುವಂತೆ ಮನವೊಲಿಸಬೇಕೆಂದು ಹೇಳಿದರು.
ಮೃಗಾಲಯ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಂ. ನಂಜುಂಡಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಹೇಮಂತ್ಕುಮಾರ್ ಗೌಡ ಹಾಗೂ ಸಂಘಟನಾ ಕಾರ್ಯದರ್ಶಿ ಸುರೇಶ್ಬಾಬು ಮಾತನಾಡಿದರು.