ವಿದ್ಯೆ ಜತೆಗೆ ಕ್ರೀಡೆಗೂ ಆದ್ಯತೆ ಇರಲಿ: ವಾಸು
ಮೈಸೂರು: ಇಂದಿನ ಯುವಜನತೆ ವಿದ್ಯೆಯಂತೆ ಕ್ರೀಡೆಗೂ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ಶಾಸಕ ವಾಸು ಹೇಳಿದರು.
ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ವತಿಯಿಂದ ಕುವೆಂಪುನಗರದ ಬಿಜಿಎಸ್ ವಿದ್ಯಾಪೀಠದ ಆವರಣದಲ್ಲಿ ಏರ್ಪಡಿಸಿದ್ದ 17ನೇ ರಾಜ್ಯ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಸಮಾರೋಪದಲ್ಲಿ ಶನಿವಾರ ಅವರು ಮಾತನಾಡಿದರು. ಗ್ರಾಮೀಣ ಭಾಗದ ಅನೇಕ ಪ್ರತಿಭೆಗಳು ಪಾದರಕ್ಷೆ ಇಲ್ಲದೆ ಅಥ್ಲೆಟಿಕ್ಸ್ನಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದ ಸಾಕಷ್ಟು ಉದಾಹರಣೆಗಳಿವೆ. ಇಂತಹ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಲು ಸಾಕಷ್ಟು ಅವಕಾಶವಿದೆ. ಎಂದು ಕಿವಿಮಾತು ಹೇಳಿದರು.
ಪ್ರಾಥಮಿಕ, ಪ್ರೌಢ ಹಾಗೂ ಕಾಲೇಜು ವಿಭಾಗಗಳಲ್ಲಿನ ವಿವಿಧ ಕ್ರೀಡೆಗಳಲ್ಲಿ ಹೆಚ್ಚಿನ ಬಹುಮಾನ ಗಳಿಸಿದ ನಾಗಮಂಗಲ ತಾಲೂಕಿನ ಬಿಜಿಎಸ್ ಶಿಕ್ಷಣ ಸಂಸ್ಥೆಯು ( ಎ ವಿಭಾಗ ತಂಡ) ಛಾಂಪಿಯನ್ ಟ್ರೋಫಿ ಪಡೆಯಿತು. ಸಾನ್ನಿಧ್ಯ ವಹಿಸಿದ್ದ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮಾನಂದನಾಥ ಸ್ವಾಮೀಜಿ ಹಾಗೂ ಆದಿಚುಂಚನಗಿರಿ ಶಾಖಾಮಠದ ಸೋಮನಾಥ ಸ್ವಾಮೀಜಿ ಹಾಗೂ ಗಣ್ಯರು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು. ವಿವಿಧ ಶಾಖಾ ಮಠದ ಶ್ರೀಗಳು ಉಪಸ್ಥಿತರಿದ್ದರು. ವಿಧಾನಪರಿಷತ್ ಸದಸ್ಯ ಡಿ. ಮಾದೇಗೌಡ, ಮಾಜಿ ಮೇಯರ್ ಮೋದಾಮಣಿ, ಪಾಲಿಕೆ ಸದಸ್ಯ ಲಿಂಗಪ್ಪ ಇದ್ದರು.