ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ
ನಂಜನಗೂಡು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬೆಲೆ ಏರಿಕೆ ಮತ್ತು ಸಚಿವ ಸಂಪುಟಕ್ಕೆ ಕಳಂಕಿತರನ್ನು ಸೇರ್ಪಡೆ ಮಾಡಿಕೊಂಡಿರುವುದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದ ಹುಲ್ಲಹಳ್ಳಿ ವೃತ್ತದಲ್ಲಿ ಪ್ರತಿಭಟಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಹೇಮಂತ್ ಕುಮಾರ್, ಎಸ್.ಡಿ. ಮಹೇಂದ್ರ, ಮಾಜಿ ಶಾಸಕ ಸಿ. ರಮೇಶ್, ಮೃಗಾಲಯ ಮಾಜಿ ಅಧ್ಯಕ್ಷ ನಂಜುಂಡಸ್ವಾಮಿ, ಶಿವರಾಂ, ತಾ. ಅಧ್ಯಕ್ಷ ಮಹೇಶ್ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸರ್ವ ವಿಧದಲ್ಲೂ ವಿಫಲಗೊಂಡಿದೆ. ದಿನ ನಿತ್ಯ ಬಳಸುವ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನ ಸಾಮಾನ್ಯರು ಜೀವನ ನಡೆಸುವುದೇ ಕಷ್ಟವಾಗಿದೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬೆಲೆ ಏರಿಕೆ ನೀತಿಯನ್ನು ಖಂಡಿಸಿದರು. ರಾಜ್ಯದ ಸಂಪತ್ತನ್ನು ಲೂಟಿ ಮಾಡಿರುವ ಡಿ.ಕೆ. ಶಿವಕುಮಾರ್ ಮತ್ತು ವಕ್ಫ್ ಆಸ್ತಿ ಭೂ ಅಕ್ರಮಗಳಂತಹ ಆಪಾದನೆ ಎದುರಿಸುತ್ತಿರುವ ರೋಷನ್ ಬೇಗ್ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿರುವುದು ರಾಜ್ಯ ಸರ್ಕಾರದ ಭ್ರಷ್ಟಚಾರಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಟೀಕಿಸಿದರು. ತಾಪಂ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ, ಸದಸ್ಯ ಮಂಜು, ಸುಧಾ ಮಹೇಶ್, ಗಿರೀಶ್, ಎನ್.ಆರ್. ಕೃಷ್ಣಪ್ಪಗೌಡ, ನಾಗಿ, ನಾಗರಾಜು, ಕಪಿಲೇಶ್, ಸಿದ್ದರಾಜು, ಪ್ರಕಾಶ್, ಶೇಖರ್ ಭಾಗವಹಿಸಿದ್ದರು.