ವೃತ್ತಿಪರ ಕೋರ್ಸ್ ಹೆಚ್ಚಳವಾಗಲಿ: ಸಚಿವ
ಮೈಸೂರು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಉದ್ಯೋಗ ಅವಕಾಶಗಳು ದೊರೆಯದೆ ನಿರಾಶರಾಗುತ್ತಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳಿಗೆ ಉದ್ಯೋಗ ದೊರಕಿಸುವ ನಿಟ್ಟಿನಲ್ಲಿ ವೃತ್ತಿಪರ ತರಬೇತಿ ಕೋರ್ಸ್‌ಗಳು ಹೆಚ್ಚಳವಾಗಬೇಕು ಎಂದು ಕಂದಾಯ ಸಚಿವ ವಿ.ಶ್ರೀನಿವಾಸಪ್ರಸಾದ್ ಹೇಳಿದರು.
ನಗರದ ಮೆಡಿವೇವ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಮತ್ತು ಚಾರಿಟಬಲ್ ಟ್ರಸ್ಟ್ ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿವಿ ಸಹಯೋಗದಲ್ಲಿ ಮುಕ್ತ ಗಂಗೋತ್ರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ವಿವಿಧ ಡಿಪ್ಲೊಮಾ ಪದವಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ವೃತ್ತಿಪರ ಕೋರ್ಸ್‌ಗಳು ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿ ಅವರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ದೊರೆಯುವಂತೆ ಮಾಡುತ್ತವೆ ಎಂದು ಅವರು ಅಭಿಪ್ರಾಯಪಟ್ಟರು.
ಕರ್ನಾಟಕ ರಾಜ್ಯ ಮುಕ್ತ ವಿವಿಯ ಕುಲಪತಿ ಪ್ರೊ.ಎಂ.ಜಿ. ಕೃಷ್ಣನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮ್ಮ ದೇಶವು ಆರೋಗ್ ಕ್ಷೇತ್ರದಲ್ಲಿ ಇತರೆ ಹಿಂದುಳಿದ ದೇಶಗಳಿಗಿಂತ ತುಂಬಾ ಹಿಂದುಳಿದಿದೆ. ವೈದ್ಯಕೀಯ ಕೋರ್ಸ್‌ಗಳು ಗ್ರಾಮೀಣ ಪ್ರದೇಶಗಳಿಗೂ ತಲುಪಿ ಆ ಮೂಲಕ ನಮ್ಮ ದೇಶವೂ ವೈದ್ಯಕೀಯ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಹೆಚ್ಚು ಮುಂದುವರಿಯುವಂತೆ ಆಗಬೇಕು ಎಂದು ತಿಳಿಸಿದರು. ರಾಜ್ಯ ಮುಕ್ತ ವಿವಿ ಕುಲಸಚಿವ (ಪರೀಕ್ಷಾಂಗ) ಪ್ರೊ.ಕೆ.ಜೆ. ಸುರೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಮೆಡಿವೇವ್ ಸಂಸ್ಥೆಯ ಪ್ರಾಂಶುಪಾಲ ಡಾ.ಸಿ. ಶರತ್‌ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಡಾ.ಎಂ.ಜಿ.ಆರ್. ಅರಸ್ ಇದ್ದರು.
ಡಿಪ್ಲೊಮಾ ಕೋರ್ಸ್‌ನಲ್ಲಿ 5 ಚಿನ್ನದ ಪದಕ, 6 ಬೆಳ್ಳಿ ಹಾಗೂ 4 ಕಂಚಿನ ಪದಕಗಳನ್ನು, ಪಿಜಿ ಡಿಪ್ಲೊಮಾ ಕೋರ್ಸ್‌ನಲ್ಲಿ 5 ಚಿನ್ನ, 6 ಬೆಳ್ಳಿ ಹಾಗೂ 5 ಕಂಚಿನ ಪದಕಗಳನ್ನು ವಿತರಿಸಲಾಯಿತು.