ಮರಳುಗಾರಿಕೆಯಿಂದ ನದಿಗೆ ಹಾನಿ ಆಗದಿರಲಿ
ಮೈಸೂರು: ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಗಳನ್ನು ಜಾರಿಗೊಳಿಸುವಾಗ ಸಾರ್ವಜನಿಕರಿಗೆ ಮರಳು ಪೂರೈಕೆಯಲ್ಲಿ ತೊಂದರೆ ಆಗದಂತೆ ಎಚ್ಚರವಹಿಸುವ ಜೊತೆಗೆ, ನದಿಗಳ ಪರಿಸರ ಹಾಳಾಗದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಂದಾಯ ಸಚಿವ ವಿ.ಶ್ರೀನಿವಾಸಪ್ರಸಾದ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಜಿಲ್ಲಾ ಮರಳು ಉಸ್ತುವಾರಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾನೂನುಬಾಹಿರ ಮರಳು ಗಣಿಗಾರಿಕೆ ತಡೆಯಲು ಅವಶ್ಯವಿರುವ ಎಲ್ಲ ಕ್ರಮ ಕೈಗೊಳ್ಳಬೇಕೆಂದು ಆದೇಶಿಸಿದರು.
ನದಿ ದಂಡೆಯಲ್ಲಿ ಮರಳು ತುಂಬಲು ಮಾತ್ರ ಲೋಡರ್‌ಗಳನ್ನು ಬಳಸಲು ನಿಯಮದಲ್ಲಿ ಅವಕಾಶ ಕಲ್ಪಿಸಲಾಗಿದೆ. ಆದರೆ ಈ ಅವಕಾಶ ದುರುಪಯೋಗಪಡಿಸಿಕೊಂಡು ಗಣಿಕಾರಿಕೆಗೆ ಯಂತ್ರಗಳನ್ನು ಬಳಸಲಾಗುತ್ತಿದೆ. ಈ ಬಗ್ಗೆ ವಿಶೇಷ ಎಚ್ಚರ ವಹಿಸಬೇಕು ಎಂದು ತಿಳಿಸಿದರು.
ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹರಾಜು ಸ್ಥಳ ಗುರುತಿಸುವಾಗ ಖಚಿತ ಗಡಿ ಗೊತ್ತು ಪಡಿಸಬೇಕು. ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಅವಕಾಶ ಇರಬಾರದು, ಈ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಅರಣ್ಯ ಸಚಿವರು ಸಭೆ ಕರೆದಿದ್ದಾರೆ ಎಂದು ಹೇಳಿದರು.
ಟಿ. ನರಸಿಪುರ ರಸ್ತೆಯಲ್ಲಿ ಮರಳು ಅಕ್ರಮ ಸಾಗಣೆ ತಡೆಯಲು ತೂಕದ ಯಂತ್ರ ಸ್ಥಾಪಿಸುವ ಅಗತ್ಯ ಇದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖಾ ಅಧಿಕಾರಿಗಳು ಹೇಳಿದಾಗ, ಇದಕ್ಕೆ ಸಮ್ಮತಿಸಿದ ಜಿಲ್ಲಾಧಿಕಾರಿ ಸಿ. ಶಿಖಾ ಅವರು ಸ್ಥಳ ಗುರುತಿಸಲು ಸೂಚನೆ ನೀಡಿದರು.
ಸೋಮವಾರ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆ ಕರೆಯಲಾಗಿದ್ದು, ಇತರೆ ಸಮಸ್ಯೆಗಳ ಬಗ್ಗೆ ಚರ್ಚಿಸುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮೈಸೂರು ಹಾಗೂ ಹುಣಸೂರು ಉಪ ವಿಭಾಗಾಧಿಕಾರಿಗಳು, ಲೋಕೋಪಯೋಗಿ ಇಲಾಖಾ ಅಧಿಕಾರಿಗಳು ಇದ್ದರು.